ಕನ್ನಡಪ್ರಭ ವಾರ್ತೆ ಬೆಂಗಳೂರು

ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪ್ಲಾಸ್ಟಿಕ್ ಬಳಕೆ ಮೇಲೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ತಪ್ಪಿದ್ದಲ್ಲ ಎಂದು ಅದಮ್ಯ ಚೇತನ ಪ್ರತಿಷ್ಠಾನದ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಎಚ್ಚರಿಸಿದ್ದಾರೆ.

ಅಕ್ಕನ ಬಳಗ ಮಹಿಳಾ ಸಮಾಜ, ಬಸವೇಶ್ವರ ಸೇವಾ ಸಮಿತಿ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಸಹಯೋಗದಲ್ಲಿ ಮಂಗಳವಾರ ನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಅಕ್ಕಮಹಾದೇವಿ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದ ಅವರು, ಎಲ್‌ಪಿಜಿ ತೀವ್ರ ಕೊರತೆ ನಡುವೆಯು ಅದಮ್ಯ ಚೇತನವು ನವೀಕರಿಸಬಹುದಾದ ಇಂಧನ ಮೂಲಗಳನ್ನು ಬಳಸಿ 1.70 ಲಕ್ಷ ಮಕ್ಕಳಿಗೆ ಊಟ ತಯಾರಿಸುತ್ತಿದೆ ಎಂದರು.

12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿದರು. ಅದೇ ಇಂದಿನ ಸಂಸತ್ತು. ಅದರಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿದರು. ಈಗ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ತೇಜಸ್ವಿನಿ ಹೇಳಿದರು.

ಬಿಡಿಎ ಕಾರ್ಯದರ್ಶಿ ಶಿವಕುಮಾರ್ ಅವರಿಗೆ ಕಾಯಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಬೇಲಿ ಮಠದ ಶಿವರುದ್ರ ಸ್ವಾಮೀಜಿ, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ, ಕನ್ನಡ ಹೋರಾಟಗಾರ ಪಾಲನೇತ್ರ ಮತ್ತಿತರರು ಉಪಸ್ಥಿತರಿದ್ದರು.