ಕನ್ನಡಪ್ರಭ ವಾರ್ತೆ ಕಲಬುರಗಿ ಕಲಬುರಗಿಯನ್ನು ಸ್ಮಾರ್ಟ್ ನಗರದ ಜತೆಗೆ ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿ ಹೊಂದಿದ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡಲಾಗಿದೆ. ನಗರದ ಅಭಿವೃದ್ಧಿಗಾಗಿ ನೂತನ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ವಿದೇಶಿ ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲಾ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇತ್ತೀಚೆಗೆ ರಾಜ್ಯ ಸರ್ಕಾರದ ವತಿಯಿಂದ ದಸರಾ ಮಹೋತ್ಸವಕ್ಕೆ 40ಕ್ಕೂ ಹೆಚ್ಚು ವಿದೇಶಿ ರಾಯಭಾರಿಗಳನ್ನು ಆಹ್ವಾನಿಸಲಾಗಿತ್ತು. ಅವರೊಂದಿಗೆ ಸಂವಾದ ನಡೆಸುವ ಅವಕಾಶ ದೊರೆತಿತ್ತು. ಕರ್ನಾಟಕದ ಕಲೆ, ಸಾಹಿತ್ಯ, ಆಹಾರ ಮತ್ತು ಸಂಸ್ಕೃತಿಯ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. *ಕಲಬುರಗಿ ನಗರಕ್ಕೆ ಮಾಸ್ಟರ್ ಪ್ಲ್ಯಾನ್: ಕಲಬುರಗಿಯ ಸಮಗ್ರ ಅಭಿವೃದ್ಧಿಗೆ ಕಳೆದ ವರ್ಷವೇ ನೂತನ ನೀಲನಕ್ಷೆ ರೂಪಿಸುವುದಾಗಿ ಘೋಷಿಸಿದ್ದೆ. ಇದೀಗ ನಗರಕ್ಕೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗಿದ್ದು, ಸ್ಮಾರ್ಟ್ ಸಿಟಿ ಮಾದರಿಯಲ್ಲಿ ವಿದೇಶಿ ಬಂಡವಾಳ ಆಕರ್ಷಿಸುವುದು, ಉದ್ಯೋಗ ಸೃಷ್ಟಿಸುವುದು ಹಾಗೂ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಮುಂದಿನ ಎರಡು ವರ್ಷಗಳಲ್ಲಿ ಈ ಅಭಿವೃದ್ಧಿ ಯೋಜನೆಗಳ ಫಲಿತಾಂಶ ಕಣ್ಣಿಗೆ ಕಾಣುವಂತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಯುವಕರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಪ್ರಬುದ್ಧ ಅಕಾಡೆಮಿ ಸ್ಥಾಪಿಸಲಾಗಿದೆ. ಜತೆಗೆ ವಿಭಿನ್ನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶದಿಂದ ಕಲಬುರಗಿ ನೆಕ್ಸ್ಟ್ ಫೌಂಡೇಶನ್ ಸ್ಥಾಪಿಸಲಾಗಿದೆ. ಖಾಸಗಿ ಸಹಭಾಗಿತ್ವದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಹೇಗೆ ಪರಿಣಾಮಕಾರಿಯಾಗಿ ಕೈಗೊಳ್ಳಬಹುದು ಎಂಬುದಕ್ಕೆ ಈ ಸಂಸ್ಥೆ ಮಾದರಿಯಾಗಲಿದೆ ಎಂದರು.*ಕಲ್ಯಾಣ ಕರ್ನಾಟಕದ ಆರ್ಥಿಕ ಪ್ರಗತಿಗೆ ಆದ್ಯತೆ: ಕಲ್ಯಾಣ ಕರ್ನಾಟಕದ ಆರ್ಥಿಕ ಚೈತನ್ಯ ಹೆಚ್ಚಿಸುವ ಉದ್ದೇಶದಿಂದ ಕಳೆದ ಸೆ.17ರಂದು ಮುಖ್ಯಮಂತ್ರಿ ಅವರು ಕಲ್ಯಾಣ ಕರ್ನಾಟಕ ಎಕನಾಮಿಕ್ ಮಿಷನ್ ಘೋಷಿಸಿದ್ದರು. ರಾಜ್ಯದ ಒಟ್ಟು ಜಿಡಿಪಿಗೆ ಬೆಂಗಳೂರು ಶೇ.40ರಷ್ಟು ಕೊಡುಗೆ ನೀಡುತ್ತಿದ್ದರೆ, ಕಲಬುರಗಿ ಜಿಲ್ಲೆಯ ಕೊಡುಗೆ ಶೇ.1.9ರಷ್ಟಿದೆ. ಈ ಪ್ರಮಾಣ ಹೆಚ್ಚಿಸುವುದು ನಮ್ಮ ಗುರಿ. ಉದ್ಯೋಗ ಸೃಷ್ಟಿ ಹೆಚ್ಚಾದಂತೆ ಜನರ ತಲಾ ಆದಾಯ ಹಾಗೂ ಜಿಲ್ಲೆಯ ಜಿಡಿಪಿಯೂ ಹೆಚ್ಚಾಗಲಿದೆ ಎಂದರು.ಎಲೆಕ್ಟ್ರಾನಿಕ್ಸ್, ಟೆಕ್ಸ್‌ಟೈಲ್ಸ್ ಹಾಗೂ ಕಲ್ಯಾಣ ಕರ್ನಾಟಕ ಬಯೋ ಎಕನಾಮಿಕ್ ಮಿಷನ್ ಮೂಲಕ ಈ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ. ತಂತ್ರಜ್ಞಾನವನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳುವುದು, ಸ್ಥಳೀಯ ಉತ್ಪನ್ನಗಳಾದ ಕಲಬುರಗಿ ತೊಗರಿ ಹಾಗೂ ಕಮಲಾಪುರ ಬಾಳೆಹಣ್ಣಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಎಂಎಲ್‌ಸಿಗಳಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ನಮೋಶಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಶ್ರವಣಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಬಿ. ಸುಶೀಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.