ನಾಳೆ ಸಂಜೆ 5ಕ್ಕೆ ದೆಹಲಿಯಲ್ಲಿಪ್ರಧಾನಿ ಮೋದಿ- ಸಿದ್ದು ಭೇಟಿ

| Published : Nov 16 2025, 01:45 AM IST

ನಾಳೆ ಸಂಜೆ 5ಕ್ಕೆ ದೆಹಲಿಯಲ್ಲಿಪ್ರಧಾನಿ ಮೋದಿ- ಸಿದ್ದು ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮತ್ತೆ ದೆಹಲಿಗೆ ತೆರಳಲಿದ್ದು, ಅಂದು ಸಂಜೆ 5ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮತ್ತೆ ದೆಹಲಿಗೆ ತೆರಳಲಿದ್ದು, ಅಂದು ಸಂಜೆ 5ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯದ ರೈತರ ಪರಿಸ್ಥಿತಿ, ಕಬ್ಬಿನ ಬೆಂಬಲ ಬೆಲೆ ಹೆಚ್ಚಳ ಕುರಿತು ವಸ್ತುಸ್ಥಿತಿಯನ್ನು ಪ್ರಧಾನಮಂತ್ರಿಯವರಿಗೆ ತಿಳಿಸಲು ಹಾಗೂ ರಾಜ್ಯಕ್ಕೆ ನೆರವು ನೀಡುವಂತೆ ಕೋರಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ.

ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಹಲವು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿ ಟನ್ ಕಬ್ಬಿಗೆ 3,300 ರು. ನಿಗದಿ ಮಾಡಲಾಗಿದ್ದರೂ, ಬೆಲೆ ಏರಿಕೆಗೆ ಒತ್ತಾಯಿಸಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ನಿರಂತರ ಪ್ರತಿಭಟನೆ ನಡೆದಿದ್ದವು. ಹೀಗಾಗಿ ಕಬ್ಬಿನ ಬೆಂಬಲ ಬೆಲೆ ಹೆಚ್ಚಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ಭೇಟಿಗೆ ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅದರಂತೆ ಭೇಟಿಗೆ ಸಮಯ ನಿಗದಿ ಮಾಡಲಾಗಿದ್ದು, ಸೋಮವಾರ ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಿವರಿಸಲಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪಿಸುವ ಸಾಧ್ಯತೆಗಳಿವೆ. ಮೇಕೆದಾಟು, ಮಹದಾಯಿ, 3ನೇ ಹಂತದ ಕೃಷ್ಣಾ ಮೇಲ್ದಂಡೆ ಮತ್ತಿತರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಅನುಮತಿ, ಅನುದಾನಗಳನ್ನು ಸಕಾಲದಲ್ಲಿ ನೀಡಲು ಕ್ರಮ ಕೈಗೊಳ್ಳುವಂತೆಯೂ ಕೋರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.