ಸಾರಾಂಶ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಬಳ್ಳಾರಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ನಗರದ ಶ್ರೀರಾಂಪುರ ಕಾಲನಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಮ್ಮೆಲ್ಸಿ ವೈ.ಎಂ. ಸತೀಶ್ ಹಾಗೂ ಶಾಸಕ ಜಿ.ಸೋಮಶೇಖರ ರೆಡ್ಡಿ ಮೋದಿ ಅವರು ದೇಶದ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಸ್ಮರಿಸಿದರು.ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡಿಸಬೇಕು. ವಿದ್ಯಾರ್ಥಿ-ಯುವಜನರು ದೇಶದ ಅಭಿವೃದ್ಧಿ ನೆಲೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಯುವಕರು ದೇಶದ ಶಕ್ತಿಯಾಗಿ ಕಾರ್ಯನಿರ್ವಹಿಸಿ, ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಜಿಲ್ಲಾ ಸಂಚಾಲಕಿ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಡಾ.ಅರುಣಾ ಕಾಮಿನೇನಿ ಮಾತನಾಡಿ, ಅ. 2ರವರೆಗೆ ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ರಕ್ತದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಸಿ ನೆಡುವುದು, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ವಿಕಸಿತ ಭಾರತ ಕುರಿತು ವಿಶೇಷ ಉಪನ್ಯಾಸಗಳು, ಸ್ವಚ್ಛತಾ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.ಬಿಜೆಪಿ ನಾಯಕಿ ಅರುಣಾ ಲಕ್ಷ್ಮಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಗುರ್ರಂ ವೆಂಕಟರಮಣ, ಪಾಲಿಕೆ ಸದಸ್ಯ ಶ್ರೀನಿವಾಸ ಮೋತ್ಕರ್, ಎಸ್.ಮಲ್ಲನಗೌಡ, ಡಾ. ಮಹಿಪಾಲ್, ಎಚ್.ಹನುಮಂತಪ್ಪ, ಶರಣು, ವಿಜಯಲಕ್ಷ್ಮಿ ಸೇರಿದಂತೆ ಸ್ಥಳೀಯ ಪಕ್ಷದ ಮುಖಂಡರು ಹಾಜರಿದ್ದರು. 200ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. 78 ಯೂನಿಟ್ ರಕ್ತ ಸಂಗ್ರಹವಾಯಿತು. ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಗುರ್ರಂ ವೆಂಕಟರಮಣ ಸೇರಿದಂತೆ ಪಕ್ಷದ ಮುಖಂಡರು ರಕ್ತದಾನ ಮಾಡಿದರು.