ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ (ಪೋಕ್ಸೊ) ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಆದೇಶದಲ್ಲಿ ಅನುಮತಿ ಪಡೆಯದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ (ವಿಚಾರಣಾ) ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಿಸಲಾಗಿದ್ದ ಷರತ್ತನ್ನು ಹೈಕೋರ್ಟ್ ಸೋಮವಾರ ಸಡಿಲಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರುಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ (ಪೋಕ್ಸೊ) ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಆದೇಶದಲ್ಲಿ ಅನುಮತಿ ಪಡೆಯದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ (ವಿಚಾರಣಾ) ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಿಸಲಾಗಿದ್ದ ಷರತ್ತನ್ನು ಹೈಕೋರ್ಟ್ ಸೋಮವಾರ ಸಡಿಲಿಸಿದೆ. ಈ ಷರತ್ತು ಸಡಿಲಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.ಯಡಿಯೂರಪ್ಪ ಅವರ ಪರ ವಕೀಲರು ಹಾಜರಾಗಿ, ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ಮಂಜೂರಾದ ವೇಳೆ ಅನುಮತಿ ಪಡೆಯದೇ ವಿಚಾರಣಾ ನ್ಯಾಯಾಲಯದ ವ್ಯಾಪ್ತಿ (ಬೆಂಗಳೂರು) ಬಿಟ್ಟು ಹೋಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ. ಸುಪ್ರೀಂ ಕೋರ್ಟ್ ತಡೆಯಾಜ್ಞೆ ಆದೇಶ ಪರಿಗಣಿಸಿ ಈ ಷರತ್ತನ್ನು ಸಡಿಲಿಸಬೇಕು ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಬೇಕು ಎಂದು ಕೋರಿದರು.ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶ ಪರಿಗಣಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಯಡಿಯೂರಪ್ಪ ಅವರ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿ ಆದೇಶಿತು. ಈ ಆದೇಶದಿಂದ ಯಡಿಯೂರಪ್ಪ ಅವರು ಬೆಂಗಳೂರು ಬಿಟ್ಟು ಹೊರ ಪ್ರದೇಶಕ್ಕೆ ಪ್ರಯಾಣಿಸಬಹುದಾಗಿದೆ.
