ದೇಶದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವುದು ಮತ್ತು ಬೇರು ಸಹಿತ ಕಿತ್ತೊಗೆಯುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು

ಬಳ್ಳಾರಿ: ಪೊಲೀಸ್ ಇಲಾಖೆ ಹಾಗೂ ನ್ಯಾಯಾಂಗ ಇಲಾಖೆಗಳು ಪರಸ್ಪರ ಪೂರಕವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ದೇಶದಲ್ಲಿ ಕಾನೂನುಬದ್ಧ ಆಡಳಿತ ಬಲವಾಗಿ ಎತ್ತಿ ಹಿಡಿಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗ ಪ್ರಭು ಹೇಳಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಮಾತನಾಡಿದರು.

ದೇಶದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವುದು ಮತ್ತು ಬೇರು ಸಹಿತ ಕಿತ್ತೊಗೆಯುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದು. ನಾಗರಿಕರ ಮೂಲಭೂತ ಹಕ್ಕು ಸಂರಕ್ಷಿಸುವಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಪ್ರಕರಣಗಳ ತನಿಖೆ ವೇಳೆ ಕೇವಲ ಸಂಖ್ಯೆಗೆ ಮಹತ್ವ ನೀಡದೆ, ಗುಣಮಟ್ಟದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಸೂಕ್ತ ಸಾಕ್ಷ್ಯಾಧಾರ ಸಲ್ಲಿಸಬೇಕು. ಇದು ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳಿಗೆ ತಕ್ಕ ಪಾಠ ಕಲಿಸಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮೈಸೂರಿನಲ್ಲಿ ದಸರಾ ವಸ್ತುಪ್ರದರ್ಶನದ ವೇಳೆ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಪೊಲೀಸರು ಸಮರ್ಥವಾಗಿ ತನಿಖೆ ನಡೆಸಿ ಯಾವುದೇ ಪ್ರತ್ಯಕ್ಷ ಸಾಕ್ಷ್ಯಾಧಾರಗಳಿಲ್ಲದಿದ್ದರೂ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಆಧಾರದಲ್ಲಿ ಕೇವಲ ಒಂದು ವರ್ಷದೊಳಗೆ ಮರಣದಂಡನೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ನಿದರ್ಶನವನ್ನು ಇದೇ ವೇಳೆ ಶ್ಲಾಘಿಸಿದ ಅವರು,

ಕಳೆದ ಸಾಲಿನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಒಟ್ಟು 154 ವೀರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಣ್ಯರು ಹುತಾತ್ಮರಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಮೂರು ಸಾರಿ ಕುಶಾಲುತೋಪು ಹಾರಿಸುವ ಮೂಲಕ ಸಂತಾಪ ಸೂಚಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ, ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಎಡಿಸಿ ಮಹಮ್ಮದ್ ಝುಬೇರ್ ಎನ್., ಎಎಸ್ಪಿ ನವೀನ್ ಕುಮಾರ್ ಸೇರಿದಂತೆ ಡಿವೈಎಸ್ಪಿಗಳು, ಸಿಪಿಐಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.