ಸಾರಾಂಶ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದವರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರ ಘಟನೆ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ಪ್ರತಿಧ್ವನಿಸಲಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದವರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರ ಘಟನೆ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ಪ್ರತಿಧ್ವನಿಸಲಿದೆ.ಲಾಠಿ ಪ್ರಹಾರ ಖಂಡಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಶಾಸಕರು ಬೆಳಗ್ಗೆ 10 ಗಂಟೆಗೆ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಬಿ.ವೈ.ವಿಜಯೇಂದ್ರ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಸದನದ ಕಲಾಪದಲ್ಲೂ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಹೋರಾಟದ ವೇದಿಕೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಬೇಕು ಎಂದು ಪಟ್ಟು ಹಿಡಿದು ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಕರೆ ನೀಡಿದ್ದರಿಂದ ಗದ್ದಲ ಉಂಟಾಯಿತು. ಹೀಗಾಗಿ ಹೋರಾಟಗಾರರನ್ನು ತಡೆಯಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದರು.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬುಧವಾರ ಅಧಿವೇಶನದ ಕಲಾಪ ರದ್ದುಪಡಿಸಲಾಗಿತ್ತು. ಗುರುವಾರ ಅಧಿವೇಶನ ಪುನಾ ಸಮಾವೇಶಗೊಳ್ಳುತ್ತಿರುವುದರಿಂದ ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿಪ್ರಹಾರ ಘಟನೆ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾಗಿದ್ದಾರೆ.