ಪೊಲೀಸರು ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ದೇಶದ ಜನ ನೆಮ್ಮದಿಯಿಂದ ಇದ್ದೇವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಪೊಲೀಸರು ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ದೇಶದ ಜನ ನೆಮ್ಮದಿಯಿಂದ ಇದ್ದೇವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.ಅವರು ಬುಧವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂದಂಡೆ (ರೀಥ) ಸಮರ್ಪಿಸಿ ಗೌರವ ಸಲ್ಲಿಸಿ ಮಾತನಾಡಿ, ದೇಶದಲ್ಲಿ ಶಾಂತಿ, ಸುವ್ಯವಸ್ಥೆಯ ಜೊತೆಗೆ ಆಂತರಿಕ ಭದ್ರತೆಗಾಗಿ ಪೊಲೀಸರು ಹಗಲಿರುಳು ಶ್ರಮಿಸುವ ಮೂಲಕ ಅಪಾರ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.
ಪ್ರತಿ ವರ್ಷ ಸಾವಿರಾರು ಪೊಲೀಸರು ಕರ್ತವ್ಯದ ಸಮಯದಲ್ಲಿ ಹುತಾತ್ಮರಾಗುತ್ತಾರೆ, ಅವರ ಸ್ಮರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪೊಲೀಸ್ ಕರ್ತವ್ಯ ನಿಷ್ಠೆಗೆ ಅವರ ಕುಟುಂಬ ಸದಸ್ಯರ ಸಹಕಾರ ಸಾಕಷ್ಟಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಮಾತನಾಡಿ, 1959ರ ಅಕ್ಟೋಬರ್ 21ರಂದು ಲಡಾಕ್ ಪ್ರದೇಶದಲ್ಲಿ ಎಸ್ಐ ಕರಂಸಿಂಗ್ ನೇತೃತ್ವದ 21 ಜನ ಕೇಂದ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿಗಳ ತಂಡ ಗಸ್ತು ತಿರುಗುವ ಸಂದರ್ಭದಲ್ಲಿ ಚೀನಾ ಸೈನ್ಯ ಏಕಾಏಕಿ ದಾಳಿ ನಡೆಸಿತು, ಈ ಸಮಯದಲ್ಲಿ ವೀರಾವೇಶದಿಂದ ಹೋರಾಡಿ ನಮ್ಮ 10 ಜನ ಪೊಲೀಸ್ ಸಿಬ್ಬಂದಿ ಹುತಾತ್ಮರಾದರು ಹಾಗೂ 11 ಜನ ಒತ್ತೆಯಾಳಾದರು, ಅವರ ತ್ಯಾಗ ಬಲಿದಾನದ ಸಂಕೇತವಾಗಿ ಪೊಲೀಸ್ ಹುತಾತ್ಮರ ದಿನ ಆಚರಣೆ ಮಾಡಲಾಗುತ್ತಿದೆ ಎಂದರು. ಇದೇ ಸಮಯದಲ್ಲಿ ಕಳೆದ ಒಂದು ವರ್ಷದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಹುತಾತ್ಮರಾದ ಪೊಲೀಸರ ಹೆಸರುಗಳನ್ನೂ ವಾಚಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಂದ ಹಾಗೂ ಇತರೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಮತ್ತು ಗಣ್ಯರಿಂದ ಹುತಾತ್ಮರ ಸ್ಮಾರಕಕ್ಕೆ ಹೂದಂಡೆ (ರೀಥ) ಸಮರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಬೀದರ್ ಡಿವೈಎಸ್ಪಿ ದೂದಪೀರ ಮುಲ್ಲಾ, ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಡಿಆರ್ಡಿಎಸ್ಪಿ ಶರಣಪ್ಪ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ನಗರದ ಗಣ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.------
ಬೀದರ್ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂದಂಡೆ ಸಮರ್ಪಿಸಿ ಗೌರವ ಸಲ್ಲಿಸಲಾಯಿತು.