ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಿಸ್ತು ಬದ್ಧವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಿಸ್ತು ಬದ್ಧವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ವಿ.ಬಿ.ದರಬಾರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು. ಭಾನುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಒಟ್ಟು 24,434 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷಾ ಕಾರ್ಯ ವ್ಯವಸ್ಥಿತವಾಗಿ ನಿರ್ವಹಿಸಲು 20 ಮಾರ್ಗಾಧಿಕಾರಿ ತಂಡ ನೇಮಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 61 ವೀಕ್ಷಕರನ್ನು ಹಾಗೂ ಉಪಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು
ವಿಶೇಷ ಸ್ಕ್ವಾಡ್ ಸದಸ್ಯರನ್ನು ನಿಯೋಜಿಸಲಾಗಿದೆ ಎಂದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಬಯೋಮೆಟ್ರಿಕ್, ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ಹಾಗೂ ಮೆಟಲ್ ಡಿಟೆಕ್ಟರ್ ಮೂಲಕ ಪರೀಕ್ಷಾರ್ಥಿಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಖಜಾನೆ ಇಲಾಖೆ ಉಪನಿರ್ದೇಶಕ ಆನಂದ ಮುಚ್ಚಂಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ.ಉಪ್ಪಾರ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.--- ಬಾಕ್ಸ್--
ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ: ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಆನಂದ.ಕೆ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಗಳು, ಇಂಟರ್ನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.