ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸಲು ಪೊಲೀಸರು ನಿರಂತರವಾಗಿ ಶ್ರಮಿಸುತ್ತಿದ್ದು, ದೇಶದ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಪೂವಿತಾ.ಎಸ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸಲು ಪೊಲೀಸರು ನಿರಂತರವಾಗಿ ಶ್ರಮಿಸುತ್ತಿದ್ದು, ದೇಶದ ಆಂತರಿಕ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಪೂವಿತಾ.ಎಸ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಸಮೀಪದಲ್ಲಿ ಆಯೋಜಿಸಿದ್ದ ಪೊಲೀಸ್‌ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಸಾಮಾನ್ಯ ಜನರು ಹಬ್ಬ, ಹರಿದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ತಮ್ಮ ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದರೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆಗಾಗಿ ತಮ್ಮ ವೈಯಕ್ತಿಕ ಬದುಕಿನ ಅನೇಕ ಸಂತೋಷಗಳನ್ನು ತ್ಯಾಗ ಮಾಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಬ್ಬದ ದಿನಗಳಲ್ಲಿಯೂ ರಜೆ ಪಡೆಯದೆ ಜನರ ರಕ್ಷಣೆಗಾಗಿ ಹಗಲಿರುಳು ದುಡಿಯುವ ಪೊಲೀಸರ ಸೇವೆಯನ್ನು ಸಮಾಜ ಸದಾ ಗೌರವದಿಂದ ಸ್ಮರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರ ಪೊಲೀಸ್ ಪಡೆಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವಾಗ ಒಟ್ಟು 154 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಸೇವೆ ಹಾಗೂ ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ 154 ಮಂದಿ ಪೊಲೀಸ್ ಸಿಬ್ಬಂದಿಯ ಹೆಸರುಗಳನ್ನು ಓದಿ ಗೌರವ ಸಲ್ಲಿಸಲಾಯಿತು. ದೇಶದ ಸ್ವಾತಂತ್ರ್ಯಾನಂತರ ಇದುವರೆಗೆ 36,852 ಮಂದಿ ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ್ದಾರೆ ಎಂಬ ಮಾಹಿತಿ ರಾಷ್ಟ್ರೀಯ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿಯೂ ಪ್ರಕಟವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ವಿವಿಧ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು. ಜಿಲ್ಲಾ ಪೊಲೀಸ್ ಬ್ಯಾಂಡ್ ತಂಡದಿಂದ ಶೋಕಗೀತೆ ನುಡಿಸಲಾಯಿತು. ಬಳಿಕ ಸಶಸ್ತ್ರ ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಪೊಲೀಸ್ ಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಿ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಎರಡು ನಿಮಿಷ ಮೌನಾಚರಣೆ ನಡೆಸಿ ಅಗಲಿದ ವೀರಯೋಧರ ಆತ್ಮಕ್ಕೆ ಶಾಂತಿ ಕೋರಿದರು.

ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿ ಇಸ್ಮಾಯಿಲ್ ಹಾಗೂ ರೇಣುಕಾ ಅವರ ಸೇವೆ ಮತ್ತು ಬಲಿದಾನವನ್ನೂ ಜಿಲ್ಲಾಧಿಕಾರಿ ಸ್ಮರಿಸಿದರು. ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಇಂತಹ ಸಿಬ್ಬಂದಿಯ ತ್ಯಾಗವು ಪೊಲೀಸ್ ಇಲಾಖೆಯ ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ, ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರು ಹಾಗೂ ಗಣ್ಯರು ಸೇರಿ ಅನೇಕರು ಉಪಸ್ಥಿತರಿದ್ದರು.