ಆಧುನಿಕ ಜೀವನಶೈಲಿಯ ವೇಗ, ಕೆಲಸದ ಒತ್ತಡ ಹಾಗೂ ನಿತ್ಯದ ಜಂಜಾಟಗಳ ನಡುವೆ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿವೆ
ಬಳ್ಳಾರಿ: ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿನ ಲೆಕ್ಕಾಚಾರಕ್ಕೆ ಸೀಮಿತವಾಗಿಲ್ಲ. ಅವು ವ್ಯಕ್ತಿಯಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ತಾಳ್ಮೆ, ಪರಸ್ಪರ ಸಹಕಾರ ಹಾಗೂ ತಂಡದ ಮನೋಭಾವ ಬೆಳೆಸುತ್ತವೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಸೋಲನ್ನು ಸ್ವೀಕರಿಸುವ ಮನೋಭಾವ ಮತ್ತು ಗೆಲುವನ್ನು ವಿನಮ್ರವಾಗಿ ಸಂಭ್ರಮಿಸುವ ಗುಣವೂ ಬೆಳೆಯುತ್ತದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು (ಡಿಎಆರ್) ಮೈದಾನದಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2026ಕ್ಕೆ ಚಾಲನೆ ನೀಡಿ ಮಾತನಾಡಿದರು.ಆಧುನಿಕ ಜೀವನಶೈಲಿಯ ವೇಗ, ಕೆಲಸದ ಒತ್ತಡ ಹಾಗೂ ನಿತ್ಯದ ಜಂಜಾಟಗಳ ನಡುವೆ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಾನಸಿಕ ಒತ್ತಡದಿಂದ ಹೊರಬಂದು ಆರೋಗ್ಯಕರ ಜೀವನ ನಡೆಸಲು ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುವುದು ಅತ್ಯವಶ್ಯಕ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯ ಒತ್ತಡ ಎದುರಿಸುತ್ತಿದ್ದಾರೆ. ಅದರಲ್ಲೂ ಪೊಲೀಸ್ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣದಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುವ ಸಂದರ್ಭದಲ್ಲಿ ಸಾಕಷ್ಟು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಹೀಗಾಗಿ ಕರ್ತವ್ಯದಷ್ಟೇ ತಮ್ಮ ಆರೋಗ್ಯದ ಕಡೆಗೂ ಗಮನಹರಿಸುವುದು ಅಗತ್ಯವಾಗಿದೆ. ದೈಹಿಕವಾಗಿ ಸದೃಢರಾಗಿದ್ದು, ಮಾನಸಿಕವಾಗಿ ಸಮತೋಲನ ಕಾಯ್ದುಕೊಂಡಾಗ ಮಾತ್ರ ಕರ್ತವ್ಯ ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಸಮಾಜದ ಶಾಂತಿ, ಸುರಕ್ಷತೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಾರೆ. ಕರ್ತವ್ಯದ ಸ್ವರೂಪವೇ ಸವಾಲುಗಳಿಂದ ಕೂಡಿರುವುದರಿಂದ ಸಹಜವಾಗಿಯೇ ಮಾನಸಿಕ ಒತ್ತಡ ಎದುರಾಗುತ್ತದೆ. ಇಂತಹ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆಗಳು ಅತ್ಯುತ್ತಮ ಸಾಧನವಾಗಿವೆ ಎಂದರು.
ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್.ಮಾತನಾಡಿ, ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕರ ಜೀವನ ನಡೆಸಲು ಕ್ರೀಡೆಗಳು ಸಹಕಾರಿಯಾಗಿವೆ. ದೈನಂದಿನ ಕೆಲಸದ ಒತ್ತಡದ ನಡುವೆ ದೇಹ ಮತ್ತು ಮನಸ್ಸಿಗೆ ವಿಶ್ರಾಂತಿ ಹಾಗೂ ಚೈತನ್ಯ ನೀಡುವ ಇಂತಹ ಕ್ರೀಡಾಕೂಟಗಳ ಆಯೋಜನೆ ಶ್ಲಾಘನೀಯ ಎಂದು ಹೇಳಿದರು.ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಸುಮನ್ ಡಿ. ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಎನ್. ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪಥಸಂಚಲನದಲ್ಲಿ ಗಮನ ಸೆಳೆದ ಏಳು ತಂಡಗಳು:ಕಾರ್ಯಕ್ರಮದ ಆರಂಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕೋಟೆ,ದುರ್ಗಾ, ಸಂಸ್ಕೃತಿ, ಸ್ಪಂದನ, ವೇದಾವತಿ, ಸ್ಪಂದಗಿರಿ ಹಾಗೂ ತುಂಗಾ ತಂಡಗಳ ಕ್ರೀಡಾಪಟುಗಳು ಆಕರ್ಷಕ ಪಥಸಂಚಲನ ನಡೆಸಿ ಗಣ್ಯರಿಂದ ಗೌರವ ವಂದನೆ ಸ್ವೀಕರಿಸಿದರು. ತಂಡಗಳ ಶಿಸ್ತುಬದ್ಧ ಹೆಜ್ಜೆ, ಏಕತೆ ಮತ್ತು ಉತ್ಸಾಹ ಮೈದಾನದಲ್ಲಿ ಕ್ರೀಡಾಕೂಟದ ಸಂಭ್ರಮ ಹೆಚ್ಚಿಸಿತು. ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ.