ಕನ್ನಡಪ್ರಭ ವಾರ್ತೆ ಬೆಳಗಾವಿ ಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸಂಸ್ಥೆಗಳು, ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ(ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿಹತ್ತು ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸಂಸ್ಥೆಗಳು, ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ(ಐಸಿಸಿ)ಯನ್ನು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಪೊಲೀಸ್ ಠಾಣೆಗೆ ಬಂದಾಗ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ದೂರು ನೀಡಲು ಬಂದ ಮಹಿಳೆಯರೊಂದಿಗೆ ದುರ್ವರ್ತನೆ ತೋರದೆ, ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು. ಮಹಿಳೆಯರು ನೀಡುವ ದೂರುಗಳಲ್ಲಿ ಸತ್ಯಾಂಶವಿದ್ದಲ್ಲಿ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ದೂರು ದಾಖಲಿಸದೆ ನೆಪಗಳನ್ನು ಹೇಳಿ ಪ್ರಕರಣ ದಾಖಲಿಸಲು ವಿಳಂಬ ಮಾಡುವುದನ್ನು ಸಹಿಸುವುದಿಲ್ಲ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರಾಕರಿಸಿದಲ್ಲಿ ಅಥವಾ ಅನಗತ್ಯ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಮಹಿಳೆಯರು ನೇರವಾಗಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಬಹುದು. ಅಂತಹ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.ಶಾಲಾ ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ಪೋಕ್ಸೋ ಕಾಯ್ದೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳಿಗೆ ತಮ್ಮ ಸುರಕ್ಷತೆ, ಹಕ್ಕುಗಳು ಹಾಗೂ ಅಪಾಯಕಾರಿ ಸಂದರ್ಭಗಳನ್ನು ಗುರುತಿಸುವ ಕುರಿತು ಸರಳವಾಗಿ ತಿಳಿಸಬೇಕು. ಪೊಲೀಸ್ ಇಲಾಖೆಯಿಂದ ಈಗಾಗಲೇ ನಡೆಯುತ್ತಿರುವ ಗುಡ್ ಟಚ್–ಬ್ಯಾಡ್ ಟಚ್ ಅರಿವು ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯದ ಜೊತೆಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರವನ್ನು ಕಡ್ಡಾಯವಾಗಿ ಒದಗಿಸಬೇಕು. ವಸತಿ ನಿಲಯಗಳಲ್ಲಿನ ಆಹಾರ, ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕುರಿತು ಮೇಲಾಧಿಕಾರಿಗಳು ಪ್ರತಿ ತಿಂಗಳು ಪರಿಶೀಲನೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.ವರದಕ್ಷಿಣೆ ಕಿರುಕುಳ, ಕೊಲೆ, ಆಸ್ತಿ ವಿವಾದ, ಕೌಟುಂಬಿಕ ಕಲಹ, ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳೆಯರ ದೂರುಗಳನ್ನು ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ವಿಚಾರಣೆ ನಡೆಸಿದರು. ದೂರುದಾರರ ಅಹವಾಲುಗಳನ್ನು ಆಲಿಸಿ, ಪ್ರಕರಣಗಳ ವಾಸ್ತವಾಂಶವನ್ನು ಪರಿಶೀಲಿಸಿ, ನೊಂದವರಿಗೆ ಶೀಘ್ರ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಎದುರಾಗುತ್ತಿರುವ ಅವ್ಯವಸ್ಥೆಗಳು, ಮೂಲಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಾಯಿತು.ಆಯೋಗದ ಕಾರ್ಯದರ್ಶಿ ರೂಪಾ.ಆರ್, ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕ್ಕಂ, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಮಹಿಳಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
---ಬಾಕ್ಸ್ಬಿಮ್ಸ್ ಅಧಿಕಾರಿಗಳಿಗೆ ಖಡಕ್ ಸೂಚನೆಬಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಅಗತ್ಯ ಮೂಲ ಸೌಲಭ್ಯಗಳ ಕೊರತೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಆಸ್ಪತ್ರೆಯಲ್ಲಿನ ಕೆಲವು ಶೌಚಾಲಯಗಳು ಬೀಗ ಹಾಕಿರುವ ಸ್ಥಿತಿಯಲ್ಲಿವೆ. ಇದರಿಂದ ಗರ್ಭಿಣಿಯರು ಸೇರಿದಂತೆ ಚಿಕಿತ್ಸೆಗೆ ಬರುವ ಮಹಿಳೆಯರು ತೊಂದರೆ ಅನುಭವಿಸುವಂತಾಗಿದೆ.ಆಸ್ಪತ್ರೆಯ ಎಲ್ಲ ಶೌಚಾಲಯಗಳನ್ನು ಕೂಡಲೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ, ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯ ತಕ್ಷಣ ಕೈಗೊಳ್ಳಬೇಕು ಎಂದು ಬಿಮ್ಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗೌರವಯುತ ಸೇವೆ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಮಹಿಳೆಯರ ಸುರಕ್ಷತೆ, ಗೌರವ ಮತ್ತು ಮೂಲಭೂತ ಸೌಲಭ್ಯಗಳ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು.