ಸಾರ್ವಜನಿಕರಲ್ಲಿ ಮನೆಗಳ ಸುರಕ್ಷತೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸುತ್ತಿದ್ದು, ಕಳ್ಳತನ ತಡೆಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕೆಲವು ದಿನಗಳ ಕಾಲ ಮನೆಗಳನ್ನು ಬಿಟ್ಟು ಹೊರಗಡೆ ತೆರಳುವ ಸಂದರ್ಭಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಕಳ್ಳತನದ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ನಗರ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ನಗರ ಪೊಲೀಸರು ವಿನೂತನ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಸಾರ್ವಜನಿಕರಲ್ಲಿ ಮನೆಗಳ ಸುರಕ್ಷತೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸುತ್ತಿದ್ದು, ಕಳ್ಳತನ ತಡೆಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕೆಲವು ದಿನಗಳ ಕಾಲ ಮನೆಗಳನ್ನು ಬಿಟ್ಟು ಹೊರಗಡೆ ತೆರಳುವ ಸಂದರ್ಭಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಕಳ್ಳತನದ ಘಟನೆಗಳು ನಡೆಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ಮನೆಯಿಂದ ಹೊರ ಹೋಗುವಾಗ ನಂಬಿಕೆಯುಳ್ಳ ವ್ಯಕ್ತಿಯನ್ನು ಮನೆಯಲ್ಲಿ ಇರಿಸುವುದು, ಉತ್ತಮ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದು, ಚಿನ್ನಾಭರಣ ಹಾಗೂ ನಗದು ಹಣವನ್ನು ಮನೆಯಲ್ಲಿ ಸಂಗ್ರಹಿಸದೇ ಬ್ಯಾಂಕ್ ಲಾಕರ್‌ನಲ್ಲಿ ಸುರಕ್ಷಿತವಾಗಿ ಇರಿಸುವುದು ಸೇರಿದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ. ಇದೇ ವೇಳೆ ಗ್ಯಾಸ್ ಸ್ಟೌವ್, ವಿದ್ಯುತ್ ಉಪಕರಣ, ಸೋಲಾರ್, ಗೀಸರ್ ದುರಸ್ತಿ ಸೇರಿದಂತೆ ವಿವಿಧ ನೆಪಗಳಲ್ಲಿ ಮನೆಗಳಿಗೆ ಬರುವ ಅಪರಿಚಿತರ ಬಗ್ಗೆ ಎಚ್ಚರಿಕೆ ವಹಿಸಬೇಕು. ಪಾರ್ಸೆಲ್ ವಿತರಣೆ ಅಥವಾ ಸರ್ಕಾರಿ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ಬರುವವರ ಗುರುತಿನ ಚೀಟಿಯನ್ನು ಪರಿಶೀಲಿಸಿದ ನಂತರವೇ ಮನೆಗೆ ಪ್ರವೇಶ ನೀಡುವಂತೆ ಸೂಚಿಸಲಾಗಿದೆ.ರಾತ್ರಿ ವೇಳೆ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ತುರ್ತು ಸೇವೆ 112ಕ್ಕೆ ಕರೆ ಮಾಡುವಂತೆ ಹಾಗೂ ಅರಸೀಕೆರೆ ನಗರ ಪೊಲೀಸ್ ಠಾಣೆಯ ದೂರವಾಣಿ 08174-232233, ಮೊಬೈಲ್ ಸಂಖ್ಯೆ 9480804753 ಮತ್ತು 9480804738ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರಯಾಣ ಅಥವಾ ಮನೆ ಖಾಲಿ ಇರುವ ಮಾಹಿತಿಯನ್ನು ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ತಮ್ಮ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳು, ವಾಹನಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಅಪರಾಧ ತಡೆಗೆ ಸಹಕರಿಸುವಂತೆ ನಗರದ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗೋಪಿ ಬಿ. ಆರ್‌, ನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್‌ ಹಾಗೂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ದಿಲೀಪ್ ಕುಮಾರ್‌ ಮನವಿ ಮಾಡಿದ್ದಾರೆ.