ಲಸಿಕೆಯಿಂದ ಮಾತ್ರ ಪೋಲಿಯೋ ಮುಕ್ತ ಸಮಾಜ ಸಾಧ್ಯ: ಯಶ್ಪಾಲ್ ಸುವರ್ಣ

| Published : Mar 04 2024, 01:15 AM IST

ಸಾರಾಂಶ

ಉಡುಪಿ ನಗರದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಮಕ್ಕಳು ಹುಟ್ಟಿನಿಂದ ಅಂಗವೈಕಲ್ಯದಂತಹ ಸಮಸ್ಯೆಗಳಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡುತ್ತಿದ್ದು, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಲಸಿಕೆಯನ್ನು ನೀಡುವುದರೊಂದಿಗೆ ಸಮಾಜವನ್ನು ಪೋಲಿಯೋ ಮುಕ್ತವಾಗಿಸಲು ಸಹಕರಿಸಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಅವರು ಭಾನುವಾರ ನಗರದ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯು ಆರೋಗ್ಯ ಶೈಕ್ಷಣಿಕ ಹಾಗೂ ಧಾರ್ಮಿಕವಾಗಿ ಬಹಳಷ್ಟು ಸಾಧನೆ ಮಾಡಿದ್ದು, ವೈದ್ಯರ ಸಲಹೆಗಳನ್ನು ಪಾಲನೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆರೋಗ್ಯ ಪೂರ್ಣ ವಾತಾವರಣವನ್ನು ನಿರ್ಮಾಣಗೊಳಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಮತಾ ಜಿ.ಎಸ್., ನಿಗದಿತ ಸಮಯದಲ್ಲಿ ಮಕ್ಕಳಿಗೆ ಬೇಕಾದ ಲಸಿಕೆಯನ್ನು ಒದಗಿಸುವುದು ಪೋಷಕರ ಜವಾಬ್ದಾರಿಯಾಗಿದ್ದು, ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ಮಕ್ಕಳು ಮುಂದಿನ ದಿನಗಳಲ್ಲಿ ಎದುರಿಸುವ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದಾಗಿದೆ ಎಂದರು.ಭಾರತವು ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಸರನ್ನು ಗಳಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವಂತೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದರು.ರೋಟರಿ ಸಂಸ್ಥೆಯ ಅಧ್ಯಕ್ಷೆ ದೀಪಾ ಮಾತನಾಡಿ, ಮಕ್ಕಳು ಆರೋಗ್ಯವಂತರಾಗಿ ಇದ್ದಾಗ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಹಾಗಾಗಿ ಮಕ್ಕಳು ಪೋಲಿಯೋಗೆ ಒಳಗಾಗದಂತೆ ಮುಂಜಾಗ್ರತೆಯಾಗಿ ಲಸಿಕೆಯನ್ನು ಪಡೆಯಬೇಕು ಎಂದರು.ನಗರಸಭೆ ಪೌರಯುಕ್ತ ರಾಯಪ್ಪ, ಡಿ.ಜೆ.ಡಿ. ಕಚೇರಿಯ ಉಪನಿರ್ದೇಶಕಿ ಡಾ. ಮಲ್ಲಿಕಾ, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ., ಎಂ.ಸಿ.ಎಚ್. ಆಸ್ಪತ್ರೆ ಅಧೀಕ್ಷಕ ಡಾ.ರಾಜಗೋಪಾಲ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ, ಎಂ.ಸಿ.ಎಚ್. ಆಸ್ಪತ್ರೆಯ ವೈದ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶೀಧರ್ ವಂದಿಸಿದರು.

ಈ ಸಂದರ್ಭ ಶಾಸಕ ಯಶ್ಪಾಲ್ ಸುವರ್ಣ, ಮಕ್ಕಳಿಗೆ ಲಸಿಕೆಯನ್ನು ಹಾಕಿದರು.