ದೇಶದಲ್ಲಿ ಪೋಲಿಯೋ ನಿರ್ಮೂಲನೆ ಸಾಧನೆಯಾಗಿದ್ದರೂ, ಈ ಸಾಧನೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಪ್ರತಿಯೊಂದು ಲಸಿಕಾ ಸುತ್ತಿನಲ್ಲೂ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ.

ಗದಗ: ಪೋಲಿಯೋ ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಯಶಸ್ವಿಗೊಳಿಸಲು 5 ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಭಾನುವಾರ ನಗರದ ಎಂಸಿಎಚ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪೋಲಿಯೋ ಎಂಬುದು ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟುಮಾಡುವ ಗಂಭೀರ ವೈರಾಣುಜನ್ಯ ಕಾಯಿಲೆಯಾಗಿದ್ದು, ಅದರ ವಿರುದ್ಧದ ಅತ್ಯಂತ ಪರಿಣಾಮಕಾರಿ ರಕ್ಷಣೆಯೇ ಈ ಲಸಿಕೆಯಾಗಿದೆ ಎಂದರು.

ದೇಶದಲ್ಲಿ ಪೋಲಿಯೋ ನಿರ್ಮೂಲನೆ ಸಾಧನೆಯಾಗಿದ್ದರೂ, ಈ ಸಾಧನೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಪ್ರತಿಯೊಂದು ಲಸಿಕಾ ಸುತ್ತಿನಲ್ಲೂ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ. ಸರ್ಕಾರವು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಉಚಿತವಾಗಿ ಪೋಲಿಯೊ ಲಸಿಕೆಯನ್ನು ನೀಡುತ್ತಿದೆ ಎಂದರು.

5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ, ಮನೆಗೆ ತೆರಳಿ ಹಾಗೂ ವಿವಿಧ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದಾರೆ.

ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಾರ್ವಜನಿಕರು ಸಹ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಪಡೆಯದೆ ಉಳಿದ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಮನೆ, ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವೂ ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವಕುಮಾರ ಮಾನಕರ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.