ಸಾರಾಂಶ
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಉಪಚುನಾವಣೆ ಎದುರಾಗುವ ಸೂಚನೆ ದೊರೆತ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ರಾಜಕೀಯ ಪಕ್ಷಗಳ ಮುಖಂಡರು ಉಪಚುನಾವಣೆ ತಯಾರಿಗೆ ಚರ್ಚೆ ಆರಂಭಿಸಿದ್ದಾರೆ.
ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ನೇತೃತ್ವದಲ್ಲಿ ಸಭೆ ನಡೆಸಿದರೆ, ಮತ್ತೊಂದೆಡೆ ತಾಲೂಕಿನ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಜತೆ ಮೈತ್ರಿ ಮುಖಂಡರು ಉಪಚುನಾವಣೆ ಕುರಿತು ಚರ್ಚೆ ನಡೆಸಿದ್ದಾರೆ.
ಕಾಂಗ್ರೆಸ್ ಸಭೆ: ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿನ ತಮ್ಮ ನಿವಾಸದಲ್ಲಿ ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಡೆದ ಮತಗಳ ವಿವರ ಹಾಗೂ ಇನ್ನಿತರ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
ಇದೇ ವೇಳೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಹೆಚ್ಚಿನ ಮತಗಳನ್ನು ಪಡೆಯಲು ಕಾರಣಕರ್ತರಾದ ಮುಖಂಡರು ಹಾಗೂ ಕಾರ್ಯಕರ್ತರನ್ನು ಅಭಿನಂದಿಸಿ, ಮುಂಬರುವ ವಿಧಾನಸಭೆ ಉಪಚುನಾವಣೆಯಲ್ಲಿ ಸಹ ಇದೇ ರೀತಿ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.
ಅಭ್ಯರ್ಥಿ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಯಾರೇ ಅಭ್ಯರ್ಥಿಯಾದರೂ ಈಗಿನಂತೆಯೇ ಒಲ್ಲರೂ ಒಗ್ಗೂಡಿ ಕೆಲಸ ಮಾಡೋಣ. ಎಲ್ಲರೂ ಸೇರಿ ಈ ಬಾರಿಯ ಉಪಚುನಾವಣೆಯಲ್ಲಿ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಲು ಶ್ರಮಿಸೋಣ ಎಂದು ಕರೆನೀಡಿದ್ದಾರೆ.
ಯೋಗೇಶ್ವರ್ ಜತೆ ಮೈತ್ರಿ ಮುಖಂಡರ ಚರ್ಚೆ
ತಾಲೂಕಿನ ಹೊರವಲಯದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಕೆಲ ಜೆಡಿಎಸ್, ಬಿಜೆಪಿ ಮುಖಂಡರು ವಿಧಾನಪರಿಷತ್ ಸದಸ್ಯ ಯೋಗೇಶ್ವರ್ ಅವರೊಂದಿಗೆ ಉಪಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ಈಬಾರಿಯ ಉಪಚುನಾವಣೆಯಲ್ಲಿ ನೀವೇ ಅಭ್ಯರ್ಥಿಯಾಗುವಂತೆ ಕೆಲ ಮುಖಂಡರು ಮನವಿ ಮಾಡಿದ್ದಾರೆ. ಕ್ಷೇತ್ರದ ಅಭ್ಯರ್ಥಿ ಕುರಿತು ಮೈತ್ರಿ ಪಕ್ಷದ ವರಿಷ್ಠರು ಒಟ್ಟಿಗೆ ಕುಳಿತು ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅಭ್ಯರ್ಥಿ ಯಾರೇ ಆದರೂ ಕ್ಷೇತ್ರದಲ್ಲಿ ನಮ್ಮ ಮೈತ್ರಿಕೂಟಕ್ಕೆ ಗೆಲುವಾಗುವಂತೆ ನೋಡಿಕೊಳ್ಳೋಣ ಎಂದು ಯೋಗೇಶ್ವರ್ ತಿಳಿಸಿದ್ದಾರೆ ಎನ್ನಲಾಗಿದೆ.