ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದನ್ನು ಮುಚ್ಚಿಹಾಕುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೀಡಲಾಗಿದ್ದ ಫೋಕ್ಸೋ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣಾ ಸೋಲಿನಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದು, ಸ್ವತಃ ಗೃಹ ಸಚಿವರೇ ಪಿರ್ಯಾದಿ ಮಾನಸಿಕ ಅಸ್ವಸ್ಥೆಯಾಗಿದ್ದಾರೆ. ೫೨ ಮಂದಿ ಗಣ್ಯ ವ್ಯಕ್ತಿಗಳ ವಿರುದ್ಧ ಆಕೆ ದೂರು ನೀಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗದು ಎಂದು ಹೇಳಿಕೆ ನೀಡಿದ್ದರು. ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುವಂತಹ ಸಂದರ್ಭದಲ್ಲಿ ಮತ್ತೆ ರೀ ಪ್ರಕರಣವನ್ನು ಪ್ರಾರಂಭಿಸಿ ಬಿಜೆಪಿ ಮುಖಂಡರಿಗೆ ಇಲ್ಲದ ಕಿರುಕುಳ ನೀಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ, ದೂರುದಾರರೇ ಮೃತಪಟ್ಟಿದ್ದರೂ ಅದನ್ನು ಮತ್ತೆ ಮುನ್ನೆಲೆಗೆ ತರಲಾಗಿದೆ ಎಂದು ದೂರಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ ಎಂದು ಆರೋಪಿಸಿದರು.ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿ ೫೩ ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ ೩ ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ೫೨ ಮಂದಿಯ ವಿರುದ್ಧ ದೂರು ದಾಖಲಾಗಿದ್ದರೂ ಅವುಗಳ ಬಗ್ಗೆ ಏಕೆ ಕ್ರಮ ಕೈಗೊಳ್ಳಲಿಲ್ಲ. ಬರಿ ಯಡಿಯೂರಪ್ಪನವರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಏಕೆ ಎಂದು ಪ್ರಶ್ನಿಸಿರುವ ಅವರು, ಸರ್ಕಾರದ ಇಂತಹ ಕ್ರಮದಿಂದಲೇ ಯಾರು ಬೇಕಾದರೂ ಇದೊಂದು ದ್ವೇಷದ ರಾಜಕಾರಣ ಎಂಬುದು ತಿಳಿಯುತ್ತದೆ ಎಂದು ಕುಟುಕಿದ್ದಾರೆ.
ಇಂತಹ ಕ್ಷುಲ್ಲಕ ರಾಜಕಾರಣಿ ಬಿಟ್ಟು ರಾಜ್ಯದ ಅಭಿವೃದ್ದಿ ಮತ್ತು ಜನರ ಬದುಕನ್ನು ಹಸನಗೊಳಿಸುವತ್ತ ಸರ್ಕಾರ ಚಿಂತನೆ ಮಾಡಲಿ, ಕಳೆದ ವರ್ಷ ಬರದಿಂದ ಕಂಗೆಟ್ಟಿದ್ದ ರೈತರಿಗೆ ಯೋಜನೆಗಳನ್ನು ರೂಪಿಸುವಂತೆ ಸಲಹೆ ನೀಡಿದ್ದಾರೆ.