ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯಶಾಸ್ತ್ರ ಅಧ್ಯಯನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದ್ದಾರೆ.ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ವಿಭಾಗವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದ ಅವರು, ವಿವಿಯಲ್ಲಿ ಅನೇಕ ಸವಾಲುಗಳಿವೆ. ಆಡಳಿತಾತ್ಮಕವಾಗಿ ಸರಿಪಡಿಸಬಹುದಾದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಅನೇಕ ಕಾಲೇಜುಗಳಲ್ಲಿ ಮುಚ್ಚಿ ಹೋಗಿರುವ ಕಲಾ ವಿಭಾಗವನ್ನು ಮರು ಆರಂಭಿಸಲು ಪ್ರಯತ್ನಪಡುತ್ತೇನೆ ಎಂದು ಭರವಸೆ ನೀಡಿದರು.1.80 ಲಕ್ಷಕ್ಕೂ ಅಧಿಕ ಮಂದಿ ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿದ್ದು, ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ಮಟ್ಟದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳಿಗೆ ಪ್ರಯತ್ನಪಡುವುದಾಗಿ ತಿಳಿಸಿದರು.
ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ವಲೇರಿಯನ್ ರೋಡ್ರಿಗಸ್ ನೂತನ ಸಂಘವನ್ನು ಉದ್ಘಾಟಿಸಿ, ರಾಜ್ಯಶಾಸ್ತ್ರ ವಿಭಾಗದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಕೇವಲ ಬೋಧನಾ ವೃತ್ತಿ ಮಾತ್ರವಲ್ಲದೆ, ಅನೇಕ ಅವಕಾಶಗಳಿವೆ. ಅವುಗಳನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು.ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಜೆ.ಎಸ್. ಸದಾನಂದ, ಪ್ರೊ. ರಾಜಾರಾಮ ತೋಳ್ಪಾಡಿ, ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಜಯರಾಮ್ ಅಮೀನ್ ಮಾತನಾಡಿದರು. ಸಂಘದ ಖಜಾಂಜಿ ಪ್ರವೀಣ್ ಬಂಗೇರ ಇದ್ದರು.
ಕುಲಪತಿ ಪ್ರೊ.ಪಿ.ಎಲ್. ಧರ್ಮ, ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ.ವಲೇರಿಯನ್ ರೋಡ್ರಿಗಸ್, ಪ್ರೊ.ಜೆ.ಎಸ್. ಸದಾನಂದ, ಪ್ರೊ.ರಾಜಾರಾಮ ತೋಳ್ಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಝೇವಿಯರ್ ಡಿಸೋಜ, ವಿಭಾಗದ ಕಚೇರಿಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಮಂಜುನಾಥ ಹಾಗೂ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಝೇವಿಯರ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಪ್ರೊ. ದಯಾನಂದ್ ನಾಯ್ಕ್ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಪತ್ರಕರ್ತ ಆರ್.ಸಿ.ಭಟ್ ಹಾಗೂ ಡಾ.ರೋಸ್ ವೀರಾ ಡಿಸೋಜ ನಿರೂಪಿಸಿದರು.