ಸಾರಾಂಶ
ಶುಕ್ರವಾರ ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯಿತಿ ನವೀಕೃತ ಸಭಾಭವನದ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿದ್ದರು.
ಕಾಪು ತಾಲೂಕಿನ ಮಜೂರು ಗ್ರಾ.ಪಂ. ನವೀಕೃತ ಸಭಾಭವನ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಕಾಪುಭಾರತ ದೇಶ ಹಳ್ಳಿಗಳ ದೇಶ, ಗ್ರಾಮಗಳು ಅಭಿವೃದ್ಧಿಯಾದರೆ, ದೇಶ ಅಭಿವೃದ್ಧಿಯಾದಂತೆ. ಆದ್ದರಿಂದ ಗ್ರಾಮಗಳ ವಿಕಸನವೇ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಕನಸಾಗಿತ್ತು. ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಮಾಡಬಾರದು, ಇದಕ್ಕಾಗಿಯೇ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷಗಳ ಚಿಹ್ನೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಅವರು ಶುಕ್ರವಾರ ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯಿತಿ ನವೀಕೃತ ಸಭಾಭವನದ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳ ಹೊಣೆಗಾರಿಕೆ ಅತ್ಯಂತ ಪ್ರಮುಖವಾದದ್ದು. ಈ ಹಿಂದೆ ಗ್ರಾಮ ಪಂಚಾಯಿತಿ ಕಚೇರಿಗೆ ಯಾವುದೇ ಕೆಲಸ ಅರಸಿ ಬರುವವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಆದರೆ ಈಗ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದಲೇ ಕೋಟ್ಯಾಂತರ ರೂಪಾಯಿಗಳ ಕಾಮಗಾರಿಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದರು.ಸಮಾರಂಭದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ರಶ್ಮಿ, ತಹಶಿಲ್ದಾರ್ ಡಾ.ಪ್ರತಿಭಾ ಆರ್ಯ, ಕಾಪು ತಾಪಂ ಇಒ ಜೇಮ್ಸ್ ಡಿಸಿಲ್ವ, ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.