ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ. ನಮ್ಮ ಜೀವನ ಶೈಲಿಯ ಅನೇಕ ವಿಷಯ, ವಸ್ತುಗಳು ಹಾಗೂ ಆಚರಣೆಗಳು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಆದ್ದರಿಂದ ಜೀವನ ಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಸಿದ್ದಪ್ಪ ಗಂಗಣ್ಣವರ್ ಹೇಳಿದರು.ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸ ಮಾಡಬೇಕು. ಪರಿಸರದ ಬಗ್ಗೆ ಕಾಳಜಿ ವಹಿಸದಿದ್ದರೆ ಬದುಕು ದುಸ್ತರವಾಗುತ್ತದೆ. ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ನ್ನು ದೈನಂದಿನ ಜೀವನದಲ್ಲಿ ಕಡಿಮೆ ಬಳಕೆ, ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಬೇಕು ಎಂದರು.ಎಂ.ಐ.ಟಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಮದ್ದೋಡಿ ಉಪನ್ಯಾಸ ನೀಡಿ, ಪ್ರತಿಯೊಬ್ಬರೂ ಪರಿಸರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಪ್ರತಿನಿತ್ಯ ಕನಿಷ್ಠ ಹತ್ತು ನಿಮಿಷವಾದರೂ ಪ್ರಕೃತಿಯ ಜೊತೆ ಸಮಯ ಕಳೆಯಬೇಕು ಎಂದರು.
ಕ.ರಾ.ಮಾ.ನಿ. ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಿ.ಪಿ ಮಹೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವ ಪರಿಸರ ದಿನಾಚರಣೆ-2024 ರ ಅಂಗವಾಗಿ ಶಾಲಾ ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಎಎಸ್‌ಪಿ ಸಿದ್ಧಲಿಂಗಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಪ ಪರಿಸರ ಅಧಿಕಾರಿ ಡಾ. ಅಮೃತ ಎ.ಎಸ್ ಸ್ವಾಗತಿಸಿ, ಶಿವಪ್ರಸಾದ್ ಅಡಿಗ ನಿರೂಪಿಸಿದರೆ, ಪರಿಸರ ಇಲಾಖೆಯ ಸಿಬ್ಬಂದಿ ರಾಜೇಶ್ವರಿ ವಂದಿಸಿದರು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣವರ್, ಎಎಸ್‌ಪಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))