ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ

| Published : Oct 09 2025, 02:00 AM IST

ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅ.28 ರಂದು ಮಂಡ್ಯ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು ಎಂದರು.

ಇ-ತ್ಯಾಜ್ಯ ( Electric Waste), ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ ಮಾಲಿನ್ಯ ಎಲ್ಲಾ ರೀತಿಯ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮಾಡಲಾಗುವುದು, ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸುವರ್ಣ ಮಹೋತ್ಸವ ನಡೆಸಲಾಗುವುದು ಎಂದರು.

ಜಿಲ್ಲೆಯ ಪ್ರತಿ ತಾಲೂಕುಗಳಿಗೂ ತಲಾ 2 ಲಕ್ಷ ರು. ಮೊತ್ತವನ್ನು ನೀಡಲಾಗುವುದು, ಪೂರ್ವಭಾವಿಯಾಗಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಪ್ರಬಂಧ ಸ್ಪರ್ಧೆ (ವಿಷಯ: ಪರಿಸರ ನೈರ್ಮಲ್ಯತೆ ಹಾಗೂ ಆರೋಗ್ಯ, ಹಸಿರಿನಿಂದ ಉಸಿರು, ವರ್ತೂಲ ಆರ್ಥಿಕತೆ, ಸುಸ್ಥಿರ ಅಭಿವೃದ್ಧಿ ) ಚರ್ಚಾಸ್ಪರ್ಧೆ, ಆಶು ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಬೇಕು, ಪರಿಸರ ಸಂರಕ್ಷಣೆಯೂ ಕೂಡ ಶೈಕ್ಷಣಿಕ ಚಟುವಟಿಕೆ ಇದ್ದಂತೆ ಎಂದರು.

ಸಭೆಯಲ್ಲಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಅಧಿಕಾರಿ ನರಸಿಂಹ ಮೂರ್ತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಕಚೇರಿಯ ಜಂಟಿ ನಿರ್ದೇಶಕ ದಿನೇಶ್, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.