ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಬೇಕು.
ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸುವ ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಬಳ್ಳಾರಿಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ಅರಣ್ಯ ಇಲಾಖೆಯಿಂದ ನಗರದ ಬೆಳಗಲ್ ಕ್ರಾಸ್‌ನ ಅರಣ್ಯ ಇಲಾಖೆಯ ನರ್ಸರಿ ಪ್ರಕೃತಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸುವ ಕಾರ್ಯಾಗಾರವನ್ನು ಮಣ್ಣಿನ ಗಣೇಶನ ಮೂರ್ತಿ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.ಈ ಕಾರ್ಯಾಗಾರದಲ್ಲಿ ಮಾಡುವ ಮಣ್ಣಿನ ಮೂರ್ತಿಯ ಗಣೇಶನಲ್ಲಿ ವಿವಿಧ ಸಸ್ಯಗಳ ಬೀಜಗಳನ್ನು ಇಟ್ಟಿರುವುದರಿಂದ ಮನೆಯ ಮುಂದಿನ ಪಾಟ್(ಕುಂಡ)ನಲ್ಲಿ ಮೂರ್ತಿಗೆ ನೀರು ಹಾಕುವುದರ ಮೂಲಕ ವಿಸರ್ಜನೆ ಮಾಡುವುದರಿಂದ ಅದು ಸಸಿಯಾಗಿ ಬೆಳೆಯುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಮಾತನಾಡಿ, ಪಿಒಪಿ ಗಣೇಶ ಮೂರ್ತಿಯನ್ನು ನದಿ ಅಥವಾ ಬಾವಿಯಲ್ಲಿ ವಿಸರ್ಜನೆ ಮಾಡುವುದರಿಂದ ಅದರ ವಿಷಕಾರಕಗಳು ಪರಿಸರಕ್ಕೆ ಹಾನಿಕಾರಕ ಆಗುವುದಲ್ಲದೇ ನೀರಿನಲ್ಲಿ ಬೆರೆತು ಬೆಳೆದ ಬೆಳೆಯ ಮೂಲಕ ಸಹ ನಮ್ಮ ದೇಹ ಸೇರಿ ಅನಾರೋಗ್ಯ ಉಂಟುಮಾಡುತ್ತವೆ ಎಂದು ತಿಳಿಸಿದರು.ಪ್ರಾಸ್ತಾವಿಕ ಮಾತನಾಡಿದ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್., ಜಿಲ್ಲಾ ಅರಣ್ಯ ಇಲಾಖೆಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮಣ್ಣಿನಿಂದ ಗಣೇಶ ಮೂರ್ತಿ ತಯಾರು ಮಾಡುವ ತರಬೇತಿ ನೀಡುತ್ತಿದ್ದು, ಇದರ ಸದುಪಯೋಗವನ್ನು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಹಂಪಿ ವಿಶ್ವವಿದ್ಯಾಲಯದ ಕಲಾ ವಿಭಾಗದ ಪಿಎಚ್‌ಡಿ ಸಂಶೋಧನಾರ್ಥಿಗಳು ಮಣ್ಣಿನ ಗಣೇಶ ಮೂರ್ತಿ ಮಾಡುವ ತರಬೇತಿ ನೀಡಿದರು.ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ವಲಯ ಅರಣ್ಯಾಧಿಕಾರಿ ಡಿ.ಕೆ. ಗಿರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಗರದ ವಿವಿಧ 20 ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿ ಸುಮಾರು 2700 ಜನರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.