ಬಡಜನರು ಉಚಿತ ಆರೋಗ್ಯ ಶಿಬಿರಗಳನ್ನು ಸದ್ಬಳಸಿಕೊಳ್ಳಿ: ಡಾ. ರಾಜೇಂದ್ರ ಪ್ರಸಾದ್

| Published : Aug 13 2024, 12:46 AM IST

ಬಡಜನರು ಉಚಿತ ಆರೋಗ್ಯ ಶಿಬಿರಗಳನ್ನು ಸದ್ಬಳಸಿಕೊಳ್ಳಿ: ಡಾ. ರಾಜೇಂದ್ರ ಪ್ರಸಾದ್
Share this Article
  • FB
  • TW
  • Linkdin
  • Email

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾಯಿಲೆಗಳು ಬರುವುದು ಸಾಮಾನ್ಯ. ಬಡವರು, ಶ್ರೀಮಂತರೆನ್ನದೇ ಕಾಯಿಲೆಗಳು ಬರುತ್ತವೆ. ಆದರೆ ಕೆಲವರಿಗೆ ಆರ್ಥಿಕ ಅನುಕೂಲತೆ ಭರಿಸಲು ಅಸಾಧ್ಯ. ಅಂತಹವರು ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ .

ಕನ್ನಡಪ್ರಭವಾರ್ತೆ ಹಾಸನ

ನಗರದ ನವಕೀಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಒಂದು ದಿನದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನ ಜಿಲ್ಲಾ ವೈದ್ಯಕೀಯ ಅಧೀಕ್ಷಕ ಡಾ. ರಾಘವೇಂದ್ರ ಪ್ರಸಾದ್ ಕೆ.ಯು. ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬಂತೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಾಸನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಿವಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕಾಯಿಲೆಗಳು ಬರುವುದು ಸಾಮಾನ್ಯ. ಬಡವರು, ಶ್ರೀಮಂತರೆನ್ನದೇ ಕಾಯಿಲೆಗಳು ಬರುತ್ತವೆ. ಆದರೆ ಕೆಲವರಿಗೆ ಆರ್ಥಿಕ ಅನುಕೂಲತೆ ಭರಿಸಲು ಅಸಾಧ್ಯ. ಅಂತಹವರು ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ AIISH ಸಂಸ್ಥೆಯ ಸಹಾಯಕ ಪ್ರಾಧ್ಯಾಪಕಿ ಸಹನ ಪಿ.ಮಾತನಾಡಿ, ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ಯೋಗ, ಪ್ರಾಣಾಯಾಮ ಇಂತಹವುಗಳನ್ನು ದಿನನಿತ್ಯ ಒಂದಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದೆಂದು ಅಭಿಪ್ರಾಯಪಟ್ಟರು ಮತ್ತು ನಮ್ಮ ಸಂಸ್ಥೆಯು ಅನೇಕ ಈ ರೀತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನೋಪಯೋಗಿ ಸೇವೆ ಮಾಡುತ್ತಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ವೇಣುಗೋಪಾಲ ರಾವ್ ಮಾತನಾಡಿ, ನಮ್ಮ ಸಂಸ್ಥೆಯು ಇಂತಹ ಉಪಯುಕ್ತ ಮಾಹಿತಿ ಮತ್ತು ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಡುತ್ತಾ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಬಿರದಲ್ಲಿ ಐವತ್ತು ಅರ್ಹ ಫಲಾನುಭವಿಗಳಿಗೆ ಶ್ರವಣ ಸಾಧನಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಮೋಹನ್ ಕುಮಾರ್ , ಕಾಲೇಜಿನ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.