ಪಿಒಪಿ, ಬಣ್ಣ ಲೇಪಿತ ಗಣೇಶ ವಿಸರ್ಜನೆ ನಿಷೇಧ

| Published : Aug 29 2024, 12:48 AM IST

ಸಾರಾಂಶ

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸುವುದು. ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್‌ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳ ವಿಸರ್ಜನೆಯನ್ನು ಜಿಲ್ಲೆಯಲ್ಲಿ ನಿಷೇಧಿಸಲಾಗಿದ್ದು, ಪ್ರತಿಯೊಬ್ಬರು ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಈ ಬಾರಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿ ಪಿ. ಎನ್.ರವೀಂದ್ರ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುಕನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಾಣಿ, ಪಕ್ಷಿ, ಜಲಚರಗಳಿಗೆ ಅಪಾಯ

ಇದರಿಂದಾಗಿ ನೈಸರ್ಗಿಕ ಜಲಮೂಲಗಳಿಗೆ ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವನಕ್ಕೆ ಅಪಾಯವಾಗುತ್ತದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೂ ಭಂಗ ಉಂಟಾಗುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಬಳಸಬೇಡಿ. ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕರು ಕೆಲವು ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕಾಗಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ನಿಯಮ ಉಲ್ಲಂಘಿಸಿದರೆ ಕ್ರಮ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸುವುದು. ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ,ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿಗಣೇಶ ಮೂರ್ತಿಗಳನ್ನು ಸ್ಥಳೀಯಾಡಳಿತ ಸಂಸ್ಥೆಗಳಾದ ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದರು.

ಹಸಿ ಕಸ ಬೇರ್ಪಡಿಸುವುದು ಕಡ್ಡಾಯ

ವಿಸರ್ಜಿಸುವ ಸಂದರ್ಭದಲ್ಲಿ ತ್ಯಾಜ್ಯವನ್ನು ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ಸ್ಥಳೀಯ ಕಸ ಸಂಗ್ರಹಣೆ ವಾಹನಕ್ಕೆ ನೀಡುವುದು. ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಂತೆ ಸಹಕಾರ ನೀಡುವಂತೆ ಅವರು ಕೋರಿದರು.