ಸಾರಾಂಶ
ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಹೇಳಿದರು.
ದೊಡ್ಡಬಳ್ಳಾಪುರ: ಪರಿಸರ ಮಾಲಿನ್ಯ ಉಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಪಿ.ಒ.ಪಿ ಗಣೇಶ ನಿಷೇಧಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣೇಶ ವಿಗ್ರಹಗಳು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದ್ದು, ಕೃತಕ ವಿಷಪೂರಿತ ಬಣ್ಣ ಬಳಕೆ, ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ಬಳಸಿ ಗಣೇಶ ವಿಗ್ರಹಗಳು ತಯಾರಿಸಿರುತ್ತಾರೆ. ಅಂತಹ ಗಣೇಶ ವಿಗ್ರಹಗಳನ್ನು ಬಳಸುವುದರಿಂದ ಪರಿಸರ ಮಾಲಿನ್ಯವಾಗುತ್ತದೆ. ಗಣೇಶ ಮೂರ್ತಿಗಳನ್ನು ಮಾರಾಟ ಮಾಡುವ ಮಳಿಗೆಗಳ ಮೇಲೆ ಅಧಿಕಾರಿಗಳು ದಾಳಿ, ಪರಿಶೀಲನೆ ನಡೆಸಿ ಮಾಲಿನ್ಯಕಾರಕ ಪಿ.ಒ.ಪಿ ಗಣೇಶ ಕಂಡುಬಂದಲ್ಲಿ ವಶ ಪಡಿಸಿಕೊಂಡು ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಇಡಲು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳ ತಯಾರಿ ಕಂಡು ಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ. ಸಾರ್ವಜನಿಕರು ಹಬ್ಬವನ್ನು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸಿ, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿಯಾಗಿ ಆಚರಿಸಿ ಎಂದು ಹೇಳಿದರು.ಸಭೆಯಲ್ಲಿ ಅಪರ ಪೋಲಿಸ್ ವರಿಷ್ಠಾಧಿಕಾರಿ ನಾಗರಾಜ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.