ಸಾರಾಂಶ
ಕನ್ನಡಪ್ರಭ ವಾರ್ತೆ ಆಲೂರು
ಮಕ್ಕಳ ಬೆಳವಣಿಗೆ ಮತ್ತು ಮಹಿಳಾ ಸಬಲೀಕರಣದ ದೂರದೃಷ್ಟಿ ಇಟ್ಟುಕೊಂಡು ರಾಷ್ಟ್ರೀಯ ಪೋಷಣ್ ಅಭಿಯಾನ ನಡೆಸಲಾಗುತ್ತಿದ್ದು ಅರ್ಹರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಆಲೂರು-ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದಿನ ಪೀಳಿಗೆಯ ಉತ್ತಮ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯು ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದರಿಂದ ಮಕ್ಕಳ ಮೇಲೆ ನೇರ ಪ್ರಭಾವ ಬೀರಿ ಮೇಲಿಂದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಮನೆಯಂಗಳದಲ್ಲಿ ಕೈತೋಟ ಬೆಳೆಸುವುದು, ಮಕ್ಕಳಿಗೆ ಕೋಳಿ ಮೊಟ್ಟೆ, ಮೊಳಕೆ ಕಾಳು ತಿನ್ನಿಸುವುದು ಮೊದಲಾಗಿ ಒಂದು ತಿಂಗಳ ಕಾಲ ಪೋಷಣ್ ಅಭಿಯಾನ ಮಾಸಾಚರಣೆಯ ಉದ್ದೇಶವಾಗಿದೆ. ಈ ಕುರಿತಂತೆ ತಾಯಂದಿರಲ್ಲಿ ಅರಿವು ಮೂಡಿಸಲು ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಸಲಾಗುತ್ತಿದೆ. ಪೋಷಣ್ ಅಭಿಯಾನ ಯೋಜನೆಯಡಿ ಬರುವ ಪ್ರತಿಯೊಂದು ಸೌಲಭ್ಯವನ್ನು ಪಡೆದುಕೊಂಡು ಅಪೌಷ್ಟಿಕತೆಯನ್ನು ತೊಲಗಿಸುವಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಮಾತೃ ವಂದನಾ, ಮಾತೃಪೂರ್ಣ, ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಮತ್ತು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಿ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ,ಆರ್ಥಿಕ ಬೆಳವಣಿಗೆಗೆ ಸಹಕರಿಯಾಗಲಿದೆ ಎಂದರು.
ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಎ.ಟಿ.ಮಲ್ಲೇಶ್ ಮಾತನಾಡಿ, ಮಗು ಜನಿಸಿದ ಒಂದು ಗಂಟೆಯೊಳಗೆ ತಾಯಿ ಎದೆ ಹಾಲು ನೀಡುವುದನ್ನು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಈ ಬಗ್ಗೆ ಎಲ್ಲರೂ ಜಾಗೃತಿ ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಯಾವುದೇ ಕಾರಣಕ್ಕೂ ಅಪೌಷ್ಟಿಕತೆಯಿಂದ ಹಾಗೂ ರಕ್ತಹೀನತೆಯಿಂದ ಬಳಲದಂತೆ ಸದಾ ನಿಗಾ ವಹಿಸಬೇಕು. ಇದರಿಂದ ಎರಡು ಜೀವಗಳು ಅನಾರೋಗ್ಯಕ್ಕೆ ಗೊತ್ತಾಗುವ ಅಪಾಯಗಳು ಹೆಚ್ಚಾಗಲಿವೆ. ಮನೆಯಂಗಳದಲ್ಲಿ ಕೈತೋಟ ಬೆಳಸುವುದು ಮಕ್ಕಳಿಗೆ ಕೋಳಿ ಮೊಟ್ಟೆ, ಮೊಳಕೆ ಕಾಳು ಸೇವಿಸಬೇಕು ಒಂದು ತಿಂಗಳ ಕಾಲ ಮಾಸಾಚರಣೆಯ ಉದ್ದೇಶವಾಗಿದೆ ಎಂದರು.ಉಪ ತಹಸೀಲ್ದಾರ್ ಪೂರ್ಣಿಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಟಿ.ಮಲ್ಲೇಶ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರುಪಣಾಧಿಕಾರಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾ ಆಲೂರು ಶಿಶು ಅಭಿವೃದ್ಧಿ ಯೋಜನ ಕಚೇರಿಯ ಮೇಲ್ವಿಚಾರಕಿಯರಾದ ಆಶಾ, ಶಹಜರಿನ, ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು. ಫೋಟೋ: ಆಲೂರಿನಲ್ಲಿ ಶಿಶು ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು.