ಸಾರಾಂಶ
ಕೆಮ್ಮಿಂಜೆ ಹಿ.ಪ್ರಾ ಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ
ಕನ್ನಡಪ್ರಭ ವಾರ್ತೆ ಪುತ್ತೂರುಬಡತನ ಎಂದಿಗೂ ವಿದ್ಯೆಗೆ ಅಡ್ಡಿಯಾಗುವುದಿಲ್ಲ. ಇದೀಗ ಸರ್ಕಾರಿ ಶಾಲೆಗಳಲ್ಲಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಹಾಲು, ಮೊಟ್ಟೆ ಸೇರಿದಂತೆ ಎಲ್ಲಾ ಸೌಲಭ್ಯ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಪೋಷಕರು ಪ್ರೋತ್ಸಾಹ ನೀಡಿ ಮಕ್ಕಳನ್ನು ಶಾಲೆಗೆ ಕಳುಹಿಸಿದಾಗ ಅವರ ಮುಂದಿನ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕದಲ್ಲಿರುವ ಕೆಮ್ಮಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ೨೦೨೫ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ, ಮಕ್ಕಳಿಗೆ ಪುಸ್ತಕ, ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.ಖಾಸಗಿ ಶಾಲೆಗಳಲ್ಲಿ ಮಾತ್ರವೇ ಗುಣಮಟ್ಟದ ಶಿಕ್ಷಣ ದೊರೆಯುವುದು ಎಂಬ ಭಾವನೆಯಿಂದ ಪೋಷಕರು ಹೊರಬರಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಪರಿಗಣಿತರಾಗಿದ್ದಾರೆ. ಭಾಷಾವಾರು ಶಿಕ್ಷಕರಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಎಲ್ಲಿಯೂ ಶಿಕ್ಷಕರ ಕೊರತೆಯಿಲ್ಲ ಎಂದು ಹೇಳಿದರು.
ಪುತ್ತೂರು ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಅರ್. ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ನೀಡುವ ಶಿಕ್ಷಣಗಳಿಗೆ ವ್ಯತ್ಯಾಸಗಳಿವೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನೇ ನೀಡಲಾಗುತ್ತಿದ್ದು ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಎಲ್ಲಾ ಶಿಕ್ಷಣ ನೀಡಲಾಗುತ್ತಿದೆ ಎಂದರು.ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಅಮ್ಮುಂಜೆ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟಿಫನ್ ವೇಗಸ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಕೆಮ್ಮಿಂಜೆ ಸ.ಹಿ.ಪ್ರಾ ಶಾಲಾ ಮುಖ್ಯಗುರು ಸಂತೋಷ್ ಇದ್ದರು.