ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು. ಭ್ರಷ್ಟಾಚಾರ ರಹಿತ ಆಡಳಿತ ಜಾರಿಗೆ ತರಲು ರಾಜ್ಯಾದ್ಯಂತ ಪ್ರಜಾ ಸೇವಾ ಕಾರ್ಯಕ್ರಮವನ್ನು ಇಂದಿನಿಂದ ಜಾರಿಗೆ ತರಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ನೀಡಿ ಸಮಸ್ಯೆ ಪರಿಹರಿಸಿಕೊಳ್ಳಿ ಎಂದು ಶಾಸಕ ಟಿಬಿ ಜಯಚಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು. ಭ್ರಷ್ಟಾಚಾರ ರಹಿತ ಆಡಳಿತ ಜಾರಿಗೆ ತರಲು ರಾಜ್ಯಾದ್ಯಂತ ಪ್ರಜಾ ಸೇವಾ ಕಾರ್ಯಕ್ರಮವನ್ನು ಇಂದಿನಿಂದ ಜಾರಿಗೆ ತರಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ನೀಡಿ ಸಮಸ್ಯೆ ಪರಿಹರಿಸಿಕೊಳ್ಳಿ ಎಂದು ಶಾಸಕ ಟಿಬಿ ಜಯಚಂದ್ರ ಹೇಳಿದರು.

ಅವರು ಶಿರಾ ತಾಲೂಕು ಗೌಡಗೆರೆ ಹೋಬಳಿಯ ನಾಡಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾ ಸೇವಾ ಜನ ಸಭೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಇದ್ದ ಜನಸ್ಪಂದನ ಕಾರ್ಯಕ್ರಮದ ಬದಲಿಗೆ ಪ್ರಜಾ ಸೇವಾ ಕಾರ್ಯಕ್ರಮವನ್ನು ನೂತನವಾಗಿ ಪ್ರಾರಂಭಿಸಲಾಗಿದೆ. ಸರ್ಕಾರ ಜನರ ಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವುದು ಇದರ ಉದ್ದೇಶ ಎಂದರು. ಪ್ರಜಾ ಸೇವಾ ಅಭಿಯಾನ ಇಂದು ರಾಜ್ಯಾದ್ಯಂತ ಪ್ರಾರಂಭ ಆಗಿದ್ದು ಶಿರಾ ತಾಲೂಕಿನಲ್ಲಿ ಗೌಡಗೆರೆಯಿಂದ ಆರಂಭ ಮಾಡಿದ್ದೇನೆ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದರು.

ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಮಾತನಾಡಿ ಸರ್ಕಾರ ಜನರ ಮನೆ ಬಾಗಿಲಿಗೆ ಬಂದಿದೆ. ಜನಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ನೀಡಿ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರದಿಂದ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಗಬೇಕು ಎಂದರು. ತಹಸೀಲ್ದಾರ್ ಆನಂದ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರ ರೈತರ, ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸಲು ಪ್ರಜಾಸೇವಾ ಅಭಿಯಾನವನ್ನು ಹಮ್ಮಿಕೊಂಡಿದೆ. ಸಾರ್ವಜನಿಕರ ಸಮಸ್ಯೆಗಳಲ್ಲಿ ಕೆಲವು ಸಮಸ್ಯೆಗಳಿಗೆ ಬೇಗ ಪರಿಹಾರ ಸಿಗುತ್ತದೆ. ಕೆಲವು ಸಮಸ್ಯೆಗಳಿಗೆ ಸಮಯ ಹಿಡಿಯುತ್ತದೆ. ಸಾರ್ವಜನಿಕರು ಸಾವಧಾನದಿಂದ ಪರಿಹರಿಸಿಕೊಳ್ಳಬೇಕು ಎಂದರು.

ತಾ.ಪಂ. ಇಓ ಹರೀಶ್.ಆರ್ ಮಾತನಾಡಿ ಈ ಹಿಂದೆ ಇದ್ದ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಅಲ್ಪ ಬದಲಾವಣೆ ಮಾಡಿ ವಿಬಿ-ಜಿ ರಾಮ್ ಜಿ ಯೋಜನೆಯಾಗಿ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ದಿನದ ಕೂಲಿ ಮೊತ್ತವನ್ನೂ ೩೭೦ ರು. ರಿಂದ ೩೮೨ ರು.ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರು ಯೋಜನೆಯಡಿ ದೊರಕುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆದುಕೊಳ್ಳಬೇಕು. ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಡಿತರ ಚೀಟಿ ಸಲ್ಲಿಸಿ ಹೊಸದಾಗಿ ಉದ್ಯೋಗ ಚೀಟಿ ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರೇಡ್-೨ ತಹಸೀಲ್ದಾರ್ ಸುನಿಲ್ ಕುಮಾರ್, ಉಪ ತಹಸೀಲ್ದಾರ್ ಯಶೋಧಾ, ಶೇಷಷಯನ, ಮಂಜುಪ್ರಸಾದ್, ಕುಮುದಾ, ಉಮೇಶ್, ಶಿವಕುಮಾರ್, ಡಾ.ಸಿದ್ದೇಶ್, ಎಚ್ ನಾಗರಾಜ್, ಬಡಿಗೇರ, ನವನೀತ್, ಪಿಡಿಓ ರಮೇಶ್, ಕನಕಪ್ಪ, ಹರಿಪ್ರಸಾದ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.