ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಕಾಲದಲ್ಲಿ ತ್ವರಿತವಾಗಿ ಪರಿಹರಿಸಲು ಜಿಲ್ಲೆಯಾದ್ಯಂತ ಸೆ.5ರಿಂದ ಪ್ರಜಾಸೇವಾ ಆಂದೋಲನ ಅಭಿಯಾನ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಕಾಲದಲ್ಲಿ ತ್ವರಿತವಾಗಿ ಪರಿಹರಿಸಲು ಜಿಲ್ಲೆಯಾದ್ಯಂತ ಸೆ.5ರಿಂದ ಪ್ರಜಾಸೇವಾ ಆಂದೋಲನ ಅಭಿಯಾನ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಹೋಬಳಿಮಟ್ಟದಲ್ಲಿ ಆಯೋಜನೆಯಾಗುತ್ತಿರುವ ಪ್ರಜಾಸೇವಾ ಆಂದೋಲನ ಅಭಿಯಾನದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ ತಾಲೂಕು ಹಾಗೂ ಹೋಬಳಿಮಟ್ಟದಲ್ಲಿ ಏರ್ಪಡಿಸಲಾಗುತ್ತಿರುವ ಪ್ರಜಾಸೇವಾ ಆಂದೋಲನ ಅಭಿಯಾನದ ಸಭೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಒಂದು ಹೆಜ್ಜೆ ಮುಂದೆ ಹೋಗಿ ಸಾರ್ವಜನಿಕರ ಮನವಿಗಳಿಗೆ ಕ್ರೀಯಾಶೀಲ ಸ್ಪಂದನೆ ನೀಡಬೇಕಿದೆ. ಆ ಮೂಲಕ ಜನಸಾಮಾನ್ಯರಿಗೆ ರೂಪಿಸಿರುವ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿದೆ ಎಂದರು.ಜನರ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಸಾರ್ವಜನಿಕ ಕುಂದುಕೊರತೆ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಅಭಿಯಾನದ ಅಂಗವಾಗಿ ಪ್ರತಿ ತಿಂಗಳ 1ನೇ ಹಾಗೂ 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕುಮಟ್ಟದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.
ತಾಲೂಕು ಹಾಗೂ ಹೋಬಳಿಮಟ್ಟದಲ್ಲಿ ನಡೆಯುವ ಪ್ರಜಾಸೇವಾ ಆಂದೋಲನ ಅಭಿಯಾನದ ಸಭೆಗಳಿಗೆ ಯಾವುದೇ ಅಧಿಕಾರಿಗಳು ಗೈರುಹಾಜರಾಗದೇ ಕಡ್ಡಾಯವಾಗಿ ಭಾಗವಹಿಸಬೇಕು. ಇದಕ್ಕಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಸಭೆಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸುವುದಲ್ಲದೆ, ಅವರೊಂದಿಗೆ ಚರ್ಚಿಸಿ, ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಬೇಕು ಎಂದರು.ಸಭೆ ಆಯೋಜನೆ ಸ್ಥಳದಲ್ಲಿ ಜನಜಾಗೃತಿಗಾಗಿ ಬರ ನಿರ್ವಹಣೆ, ಬಾಲ್ಯವಿವಾಹ ತಡೆ, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ, ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು, ಕೃಷಿ, ತೋಟಗಾರಿಕೆ, ರೇಷ್ಮೆ, ನಗರಸಭೆ, ಅರಣ್ಯ, ವನ್ಯಜೀವಿ ಸಂರಕ್ಷಣೆ, ಪೋಡಿಖಾತೆ, ಕೈಗಾರಿಕೆ, ಆರೋಗ್ಯ, ಗ್ಯಾರಂಟಿ ಯೋಜನೆಗಳು ಸೇರಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಐ.ಇ.ಸಿ ಕಾರ್ಯಕ್ರಮಗಳ ಕುರಿತು ಮಳಿಗೆಗಳನ್ನು ತೆರೆಯಬೇಕು ಎಂದರು.
ಪ್ರತಿ ಬುಧವಾರ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕೃತವಾದ ಅರ್ಜಿಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಪರಿಹಾರದಿಂದ ಅತೃಪ್ತರಾದವರು ಅಧಿಕಾರಿ ಮುಂದೆ ಖುದ್ದು ಹಾಜರಾಗಿ ಅಹವಾಲು ಮಂಡಿಸಬಹುದಾಗಿದೆ. ಪ್ರಜಾಸೇವಾ ಆಂದೋಲನ ಅಭಿಯಾನದ ಸಭೆ ಆರಂಭಕ್ಕೂ ಮೊದಲು ಸಾರ್ವಜನಿಕರ ಆಕರ್ಷಣೆಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಡಿ.ವೈ.ಎಸ್.ಪಿ ಸ್ನೇಹರಾಜ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟೀಲ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸೌಭಾಗ್ಯ, ತಹಸೀಲ್ದಾರ್ ಗಿರಿಜಾ, ನಗರಸಭೆ ಪರಿಸರ ಅಭಿಯಂತರರಾದ ರೂಪ ಹಾಜರಿದ್ದರು.