ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ರಜಾ ಸೇವೆ ಆಂದೋಲನ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ರಜಾ ಸೇವೆ ಆಂದೋಲನ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.ಸಮೀಪದ ಸೂರಣಗಿ ಗ್ರಾಮದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ಅಧಿಕಾರಿಗಳು ಸಾರ್ವಜನಿಕರ ತುರ್ತು ಸಮಸ್ಯೆಗೆ ಆದ್ಯತೆ ನೀಡಿ ಹಾಗೂ ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹರಿಗೆ ತಲುಪಬೇಕು. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಜನರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಬೇಕು ಎಂದು ತಿಳಿಸಿದರು.
ಈ ವೇಳೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ, ರಸ್ತೆಗಳ ದುರಸ್ತಿ ಹಾಗೂ ಅಗತ್ಯವಿರುವ ಕಡೆ ಹೊಸ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ ಸುಧಾರಣೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು. ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಅಧಿಕಾರಿಗಳ ಗಮನ ಸೆಳೆದರು. ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಕೆಲಸಗಳು ವಿಳಂಬವಾಗುತ್ತಿದ್ದು, ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂಬ ಅಹವಾಲುಗಳೂ ಕೇಳಿಬಂದವು. ಸಂಬಂಧಿಸಿದ ಇಲಾಖೆಗಳಿಂದ ತ್ವರಿತವಾಗಿ ಸೇವೆ ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.ಈ ವೇಳೆ ತಹಸೀಲ್ದಾರ ಧನಂಜಯ ಎಂ., ತಾಪಂ ಇಒ ಮಂಜುಳಾ ಹಕಾರಿ, ತಾಪಂ ಗ್ರಾಮೀಣಾಭಿವೃದ್ದಿ ಅಧಿಕಾರಿ ಕೃಷ್ಣಪ್ಪ ಧರ್ಮರ, ತಾಲೂಕಾ ವೈದ್ಯಾಧಿಕಾರಿ ಡಾ. ಸುಭಾಷ ದಾಯಗೊಂಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಇದ್ದರು.