ಅರ್ಹ ಫಲಾನುಭವಿಗಳು ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಅಶೋಕ ಶಿಗ್ಗಾವಿ ಹೇಳಿದರು.
ಹನುಮಸಾಗರ: ಅರ್ಹ ಫಲಾನುಭವಿಗಳು ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಅಶೋಕ ಶಿಗ್ಗಾವಿ ಹೇಳಿದರು.
ಸಮೀಪದ ಹನುಮನಾಳ ಗ್ರಾಮದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಲ್ಲಿರುವ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡುವುದು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಸೌಲಭ್ಯ ಕಲ್ಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆ, ಬೇಡಿಕೆ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಸಾಧ್ಯವಾದಷ್ಟು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುವುದು. ಉಳಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ಕಳುಹಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು
ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದಾಗಿ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಆದ್ದರಿಂದ ಸಾರ್ವಜನಿಕರು ಅಧಿಕಾರಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಿ ತಮ್ಮ ಸಮಸ್ಯೆಗಳನ್ನು ತಿಳಿಸುವ ಮೂಲಕ ಪ್ರಜಾಸೇವೆ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಇಲಾಖೆಗಳ ವ್ಯಾಪ್ತಿಯಲ್ಲಿರುವ ಯೋಜನೆಗಳು, ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಸೌಲಭ್ಯ ಪಡೆಯುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಒಂದೇ ಸ್ಥಳದಲ್ಲಿ ಹಲವು ಇಲಾಖೆಗಳ ಮಾಹಿತಿ ಮತ್ತು ಸೇವೆ ದೊರೆಯುವಂತಾಗಿತ್ತು.
ವಿವಿಧ ಇಲಾಖೆಗಳ ಮಳಿಗೆ ಸ್ಥಾಪನೆಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲು ವಿವಿಧ ಇಲಾಖೆಗಳ ವತಿಯಿಂದ ಪ್ರತ್ಯೇಕ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಅರಣ್ಯ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಮಳಿಗೆಗಳನ್ನು ತೆರೆಯಲಾಗಿತ್ತು.
ಮಳಿಗೆಗಳಿಗೆ ಭೇಟಿ ನೀಡಿದ ಸಾರ್ವಜನಿಕರಿಗೆ ಆಯಾ ಇಲಾಖೆಗಳ ಯೋಜನೆಗಳು, ಫಲಾನುಭವಿಗಳ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ದೊರೆಯುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ತುಘಲಪ್ಪ ದೇಸಾಯಿ, ಗ್ರೇಡ್-2 ತಹಸೀಲ್ದಾರ್ ರಜನಿಕಾಂತ ಕೆಂಗೇರಿ, ಸಿಡಿಪಿಒ ಯಲ್ಲಮ್ಮ ಹಂಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ, ತಾಲೂಕು ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.