ಮಕ್ಕಳಲ್ಲಿರುವ ಸುಪ್ತವಾದ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಹರಿಹರ
ಮಕ್ಕಳಲ್ಲಿರುವ ಸುಪ್ತವಾದ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.ನಗರದ ಮರಿಯಾ ನಿವಾಸ ಶಾಲೆ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ಸ್ಪರ್ಧೆಗಳಲ್ಲಿ ಗೆಲುವು ಅಥವಾ ಸೋಲು ಮುಖ್ಯವಲ್ಲ. ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಬಹಳ ಮುಖ್ಯ. ಹರಿಹರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದ ಪ್ರತಿಭೆಗಳು ಜಿಲ್ಲಾ, ರಾಜ್ಯ ಮಟ್ಟದಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಬೇಕು. ಆ ಮೂಲಕ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಸ್ಥಾನಗಳನ್ನು ಪಡೆದು ನಮ್ಮ ತಾಲೂಕಿನ ಹೆಸರು ರಾಜ್ಯದಾದ್ಯಂತ ಬೆಳಗುವಂತೆ ಮಾಡಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಲೂಕಿನ 14 ಸಮೂಹ ಸಂಪನ್ಮೂಲ ಕೇಂದ್ರಗಳ ವಿದ್ಯಾರ್ಥಿಗಳ ಭಾಗವಹಿಸಿದ್ದಾರೆ. ಇದರಲ್ಲಿ ತಾಲೂಕಿನಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುತ್ತದೆ. ಪ್ರಥಮ ಸ್ಥಾನ ಪಡೆದ ತಂಡ ಮಾತ್ರ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದೆ. ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ತಾಲೂಕಿನ ವಿವಿಧ ಶಾಲೆಗಳಿಂದ 700ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಗಳನ್ನು ಪ್ರದರ್ಶಿಸಿದರು. ವೃತ್ತ ಆರಕ್ಷಕ ನಿರೀಕ್ಷಕ ಸುರೇಶ್ ಸಗರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರೇಶ್, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ವಿಜಯ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಚಂದ್ರಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ್, ಸಿದ್ದಪ್ಪ ಸಂಗಣ್ಣ, ಕುಬೇಂದ್ರಪ್ಪ ಮೆಕ್ಕಪ್ಪನವರ್, ಗದಿಗೆಪ್ಪ ಹಳೆಮನಿ, ವೆಂಕಟೇಶ್, ಅಷ್ಪಾಕ್ ಅಹಮ್ಮದ್, ಕೆ.ಟಿ.ಮಂಜಪ್ಪ, ರೇವಣ ನಾಯ್ಕ್, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಪೋಷಕರು ಭಾಗವಹಿಸಿದ್ದರು.ವೈಯಕ್ತಿಕ ಸ್ಪರ್ಧೆ:
ಭರತ ನಾಟ್ಯ, ಭಾಷಣ, ಚರ್ಚಾ ಸ್ಪರ್ಧೆ, ಚಿತ್ರಕಲೆ, ರಂಗೋಲಿ, ಜಾನಪದ ಗೀತೆ, ಪ್ರಬಂಧ, ಕನ್ನಡ ಕವನ ವಾಚನ ಸೇರಿದಂತೆ ಒಟ್ಟು 13 ವಿವಿಧ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಸಾಮೂಹಿಕ ವಿಭಾಗದಲ್ಲಿ ಜಾನಪದ ನೃತ್ಯ ಹಾಗೂ ರಸಪ್ರಶ್ನೆ ಸ್ಪರ್ಧೆಗಳು ನಡೆದವು.ತರಗತಿ 1ರಿಂದ 4 ಮತ್ತು 5ರಿಂದ 7 ಹಾಗೂ 8ರಿಂದ 10ನೇ ತರಗತಿಗಳ 3 ಹಂತಗಳಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳನ್ನು ನಡೆಸಲಾಯಿತು.