'Pratibha Karanji' is an excellent platform for unveiling the latent talent of children.
ಕನ್ನಡಪ್ರಭ ವಾರ್ತೆ ಸೊರಬ
ವಿದ್ಯಾರ್ಥಿಗಳಲ್ಲಿ ಅಡಗಿರುವ ವಿಭಿನ್ನ ಹಾಗೂ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಹೊರಹಾಕಲು ಶಾಲಾ ಹಂತದಲ್ಲಿ ಆಯೋಜಿಸಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಶ್ರೇಷ್ಠವಾದ ವೇದಿಕೆಯಾಗಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನಿಲ್ಗೌಡ ಹೇಳಿದರು.ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಹರೀಶಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ಸಂಗೀತ, ನೃತ್ಯ, ಚಿತ್ರಕಲೆ, ಅಭಿನಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸರ್ಕಾರ ಕಲ್ಪಿಸಿರುವ ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡು, ತಮ್ಮಲ್ಲಿರುವ ನೈಜ ಪ್ರತಿಭೆಯನ್ನು ಮುಕ್ತವಾಗಿ ಪ್ರದರ್ಶಿಸಿದಾಗ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸ ಸಾಧ್ಯ ಎಂದರು.ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಮುತುವರ್ಜಿ ಹಾಗೂ ದೂರದೃಷ್ಟಿಯ ಫಲವಾಗಿ ಹರೀಶಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಎಂದು ಮಾರ್ಪಡಿಸಲಾಗಿದೆ. ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಗುಣಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ಶಿಕ್ಷಣವನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹರೀಶಿ ಶಾಲೆಯು ಕೆಪಿಎಸ್ ಆಗಿ ರೂಪುಗೊಂಡಿರುವುದರಿಂದ ಈ ಭಾಗದ ಮಕ್ಕಳಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಕಲಿಕೆ, ಸುಸಜ್ಜಿತ ಪ್ರಯೋಗಾಲಯ ಹಾಗೂ ಉನ್ನತ ಮಟ್ಟದ ಮೂಲಭೂತ ಸೌಕರ್ಯಗಳು ಲಭ್ಯವಾಗಲಿವೆ. ಇದು ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಶೈಕ್ಷಣಿಕ ಪ್ರಗತಿಯಲ್ಲಿ ಒಂದು ಹೊಸ ಮೈಲಿಗಲ್ಲಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯ ತಬಲಿ ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಮುಖಂಡರಾದ ಶ್ರೀಧರ್ ಈಡೂರು, ಮೀನಾಕ್ಷಿ ಹೆಗಡೆ, ಚಿದಾನಂದ ನಾಯ್ಕ, ರವೀಶ್ ನಾಯ್ಕ, ಮೇಘನಾ ಬಾಪಟ್, ಅಮೃತ ಬಾಪಟ್, ನಾರಾಯಣ ಭಟ್, ಮಂಜು ಮುಗೇರ್, ಶೇಖರ್ ಮುಗೇರ್, ಭಾರತಿ ಮುಗೇರ್, ಕವಿತಾ ಬಾಪಟ್ ಸೇರಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-----ಫೋಟೋ:೧೯ಕೆಪಿಸೊರಬ-೦೨ :
ಸೊರಬ ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ಸುನಿಲ್ ಗೌಡ ಮಾತನಾಡಿದರು.