ಸಾರಾಂಶ
ಶಿಕ್ಷಣ ಕ್ಷೇತ್ರದಲ್ಲಿ ಕಲೆ ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ತಮ್ಮಲ್ಲಿ ಅಡಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲೆ ಪ್ರದರ್ಶಿಸುತ್ತಾರೆ.
ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮದಲ್ಲಿ ಲಿಂಗರಾಜಗೌಡ
ಕನ್ನಡಪ್ರಭ ವಾರ್ತೆ ಮುಂಡರಗಿಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಪುರಸಭೆ ಸದಸ್ಯ ಲಿಂಗರಾಜಗೌಡ ಪಾಟೀಲ ಹೇಳಿದರು.
ಅವರು ಬುಧವಾರ ಪಟ್ಟಣದ ವಿ.ಜಿ. ಲಿಂಬಿಕಾಯಿ ಶಾಲೆಯ ಆವರಣದಲ್ಲಿ ಜಿಪಂ ಗದಗ, ತಾಪಂ ಮುಂಡರಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮುಂಡರಗಿ ಸಂಯುಕ್ತಾಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2023-24 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ ಕ್ಷೇತ್ರದಲ್ಲಿ ಕಲೆ ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ತಮ್ಮಲ್ಲಿ ಅಡಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲೆ ಪ್ರದರ್ಶಿಸುತ್ತಾರೆ. ಇಲ್ಲಿ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಸೇರಿದಂತೆ ಎಲ್ಲ ಶಾಲೆಗಳ ಮಕ್ಕಳು ಸಹ ಪಾಲ್ಗೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಮಕ್ಕಳು ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮನೆಯಲ್ಲಿ ತಾಯಿ ಪ್ರೇರಣೆಯಾದರೆ ಶಾಲಾ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು ಎಂದರು.
ರೋಟರಿ ಶಿಕ್ಷಣ ಸಂಸ್ಥೆ ಪ್ರಧಾನ ಕಾರ್ಯಾದರ್ಶಿ ಕೊಟ್ರೇಶ ಅಂಗಡಿ ಮಾತನಾಡಿ, ಮಕ್ಕಳಲ್ಲಿ ಅನೇಕ ಪ್ರತಿಭೆಗಳಿದ್ದು, ಅವುಗಳನ್ನು ಪ್ರದರ್ಶಿಸಲು ಸರ್ಕಾರ ಇಂತಹ ಕಾರ್ಯಕ್ರಮ ರೂಪಿಸುವ ಮೂಲಕ ಅನುಕೂಲ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಮಕ್ಕಳನ್ನು ಕೇವಲ ಪಠ್ಯ ಮತ್ತು ಪರೀಕ್ಷೆ, ಅಂಕಗಳಿಗಾಗಿ ಮಾತ್ರ ಸೀಮಿತಗೊಳಿಸುತ್ತಿದ್ದೇವೆ. ಆದರೆ ಮಗು ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತದೆಯೋ ಆ ವಿಷಯದಲ್ಲಿಯೇ ತೊಡಗಿಸಿ ಪ್ರೋತ್ಸಾಹಿಸಿದರೆ ಮಹತ್ತರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸದೇ ಎಲ್ಲ ಚಟುವಟಿಕೆಗಳಲ್ಲಿಯೂ ತೊಡಗಿಸಬೇಕು ಎಂದರು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಪಡ್ನೇಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಕ್ಕಮಹಾದೇವಿ ಕಡ್ಡಿ, ಡಾ. ಅನ್ನದಾನಿ ಮೇಟಿ, ಜಗನ್ನಾಥ ಅಳವಂಡಿ, ತಾಲೂಕು ರಾ.ಸ.ನೌ. ಸಂಘದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ, ತಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಶಿವಕುಮಾರ ಸಜ್ಜನರ, ಕಾಶೀನಾಥ ಶಿರಬಡಗಿ, ಡಿ.ಜಿ. ಪೂಜಾರ, ಎ.ಡಿ. ಬಂಡಿ, ರವಿ ನಾಯಕ, ಬಸವಣ್ಣೆಪ್ಪ, ಬಿ.ಕುಮಾರ, ಸಿ.ವಿ. ಪಾಟೀಲ, ನಾಗರಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬಿ.ಆರ್.ಸಿ. ಸಮನ್ವಯಾಧಿಕಾರಿ ಜಿ.ಎಸ್. ಅಣ್ಣೀಗೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚಿದಾನಂದ ವಡ್ಡರ ನಿರೂಪಿಸಿ, ಎಸ್.ಡಿ. ಬಸೇಗೌಡ್ರ ವಂದಿಸಿದರು.