ಚಳ್ಳಕೆರೆ ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಶಿಕ್ಷಣ ನೀಡುವುದಲ್ಲದೆ, ಅವರಲ್ಲಿರುವ ಪ್ರತಿಭೆ ಗುರುತಿಸಿ ಗೌರವಿಸುವ ಮೂಲಕ ವಿದ್ಯಾರ್ಥಿಗಳ ಬದುಕು ಉತ್ತಮವಾಗಿ ಹೊರ ಹೊಮ್ಮುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ವಿಶೇಷವಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿನ ಕಲೆಯನ್ನು ಇಂತಹ ಕಾರ್ಯಕ್ರಮಗಳ ಮೂಲಕ ಪ್ರದರ್ಶಿಸಿ ಗುರುತಿಸುವ ಕಾರ್ಯ ನಡೆಯುತ್ತಿರುವುದು ಸಂತಸ ವಿಷಯ. ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆಯ ವೈಶಿಷ್ಠ ಪೂರ್ಣ ಕಾರ್ಯಕ್ರಮವೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇಂದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅನೇಕ ರೀತಿಯ ಕಲೆಯನ್ನು ಪ್ರದರ್ಶಿಸಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕ ಕಂಸಾಳೆ ಪದ ಈ ಭಾಗದಲ್ಲೂ ಜನಪ್ರಿಯವಾಗುತ್ತಿದೆ. ವಿದ್ಯಾರ್ಥಿಗಳನ್ನು ಕಲಾವಂತರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರವೂ ಹೆಚ್ಚು ಮಹತ್ವದಿಂದ ಕೂಡಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಪ್ರಾಥಮಿಕ ವಿಭಾಗದ 27 ಸ್ಪರ್ಧೆಗಳಿಗೆ 250 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಪ್ರೌಢಶಾಲಾ ವಿಭಾಗದ 30 ಸ್ಪರ್ಧೆಗಳಿಗೆ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಒಟ್ಟು 31 ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಈ ಸ್ಫರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಗ್ರಾಮೀಣ ಭಾಗದ ರಂಗಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಹುತೇಕ ಶಾಲೆಗಳು ರಂಗಕಲೆಯ ಪ್ರದರ್ಶನಕ್ಕೆ ಮುಂದಾಗಿವೆ. ಒಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳಲ್ಲೂ ಕಲೆಯನ್ನು ಬೆಳೆಸಿ ಉಳಿಸುವ ಉತ್ಸಾಹ ಎದ್ದುಕಾಣುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ.ವೀರೇಶ್, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಓ.ರಂಗಸ್ವಾಮಿ, ಕಸಾಪ ಅಧ್ಯಕ್ಷ ವೀರಭದ್ರ ಸ್ವಾಮಿ, ಶಿವಲೀಲಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಒ.ರಾಜಣ್ಣ, ಕೆ.ಸಣ್ಣಸೂರವ್ವ, ಜಯಮ್ಮ, ಪಿ.ಹನುಮಂತರಾಯ, ಜಿ.ಸುರೇಶ್, ಆರ್.ಸಿದ್ದಲಿಂಗಪ್ಪ, ಆರ್.ಸದಾಶಿವಯ್ಯ, ತಿಮ್ಮರಾಜು, ಟಿ.ಓಬಣ್ಣ, ಬಿ.ರಾಜಕುಮಾರ್, ಡಿ.ಟಿ.ಶ್ರೀನಿವಾಸ್, ಡಿ.ಎಸ್.ಪಾಲಯ್ಯ, ಕೆ.ಎಸ್.ಶ್ರೀಕಾಂತ್, ಪಿ.ನಾಗರಾಜು, ಭೀಮಣ್ಣ, ಬಿಆರ್‌ಸಿ ಎಚ್.ವಿ.ಮಂಜುಬಾಬು, ಯು.ಸುನೀಲ್‌ನಾಯಕ, ಕೆ.ಎಂ.ಮಲ್ಲಿಕಾರ್ಜುನ್, ಪಿ.ಮಂಜುನಾಥ ಮುಂತಾದವರು ಪಾಲ್ಗೊಂಡಿದ್ದರು.