ಸಾರಾಂಶ
ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಗಣ್ಯರು ಮಾತನಾಡಿದರು. ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಕೆಪಿಎಸ್ ಶಾಲೆಯ ಎಸ್ಡಿಎಂಸಿ ಉಪಾಧ್ಯಕ್ಷ ಎನ್. ಎಸ್. ಉದಯಶಂಕರ್ ಹೇಳಿದರು.ಕೆಪಿಎಸ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 2024- 25ರ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ವಿಷಯಗಳಷ್ಟೇ ಪ್ರಾಮುಖ್ಯವಾಗಬಾರದು. ಪಠ್ಯೇತರ ಚಟುವಟಿಕೆಗಳಲ್ಲೂ ಉತ್ಸಾಹದಿಂದ ಪಾಲ್ಗೊಳ್ಳಬೇಕು. ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು.ಬಿ ಆರ್ ಸಿ ಮಂಜುಳ ಚಿತ್ರಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಂಜುಳ ಚಿತ್ರಾಪುರ ತಿಳಿಸಿದರು.
ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ಕೆಪಿಎಸ್, ಶ್ರೀರಾಮ ಟ್ರಸ್ಟ್, ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಸೇಕ್ರೆಡ್ ಹಾರ್ಟ್, ಎಮ್ಮೆಮಾಡು, ನೇತಾಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ನೃತ್ಯ, ಕವ್ವಾಲಿ, ರಸಪ್ರಶ್ನೆ, ಕಂಠಪಾಠ, ಮಣ್ಣಿನ ಮಾದರಿ ತಯಾರಿ, ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಮೆರೆದರು.ಈ ಸಂದರ್ಭ ವಿವಿಧ ಶಾಲೆಗಳ ಶಿಕ್ಷಕರು ತೀರ್ಪುಗಾರರಾಗಿ ಪಾಲ್ಗೊಂಡಿದ್ದು ಗಣ್ಯರು ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣವಚನ ನೀಡಿ ಶುಭ ಹಾರೈಸಿದರು.