ಕನ್ನಡಪ್ರಭ ವಾರ್ತೆ ಪಾಂಡವಪುರ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜನರೊಂದಿಗೆ ಜನತಾದಳ ಕಾರ್ಯಕ್ರಮವು ಮೇ 7ರಂದು ಪಟ್ಟಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಲು ಇದೇ ಏ.28ರಂದು ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಮೇ 7ರಂದು ನಡೆಯಲಿರುವ ಜನರೊಂದಿಗೆ ಜನತಾದಳ ಕಾರ್ಯಕ್ರಮದ ಉದ್ದೇಶದ ಜನರ ವಿಶ್ವಾಸಗಳಿಸುವುದಾಗಿದೆ ಎಂದರು.

ಕಾರ್ಯಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಇದೇ ಏ.28 ರಂದು ಮಾಜಿ ಸಚಿವ ಸಿಎಸ್ಪಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಆಗಮಿಸಬೇಕು ಎಂದು ಮನವಿ ಮಾಡಿದರು.

ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಮಾತನಾಡಿ, ಜನರೊಂದಿಗೆ ಜನತಾದಳ ಕಾರ್ಯಕ್ರಮ ಮಂಡ್ಯ ಜಿಲ್ಲೆಯ ಬಹುತೇಕ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಮೇ 7ರಂದು ನಡೆಯಲಿದೆ. ಜಿಲ್ಲೆಯ ಎಲ್ಲಾ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪಕ್ಷದ ಅಧ್ಯಕ್ಷರು, ಮುಖಂಡರು ಭಾಗವಹಿಸಲಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರೂ ಒಟ್ಟಾಗಿದ್ದು ಮುಂದೆ ಬರುವ ಚುನಾವಣೆ ಎದುರಿಸುತ್ತೇವೆ ಎಂದರು.


ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ದೇಶ, ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಅಲೆ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರವೂ ಸಹ ಜನರ ವಿಶ್ವಾಸಗಳಿಸಲು ವಿಫಲವಾಗಿದೆ. ಇದೀಗ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲೂ ಸಹ ಎನ್‌ಡಿಎ ಅಧಿಕಾರಹಿಡಿಯುವುದು ಖಚಿತವಾಗಿದೆ ಎಂದರು.

ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ಕ್ಷೇತ್ರದಲ್ಲಿ ನಡೆದ ಎಲ್ಲಾ ಸ್ಥಳೀಯ ಸಂಘ-ಸಂಸ್ಥೆ, ತಾಲೂಕು ಮಟ್ಟದ ಸಹಕಾರ ಸಂಘಗಳ ಚುನಾವಣೆಗಳಲ್ಲೂ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರ ನೇತೃತ್ವದಲ್ಲಿ ಜೆಡಿಎಸ್ ಬೆಂಬಲಿತರು ಅಧಿಕಾರ ಹಿಡಿದಿರುವುದೇ ಇದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇವುಗಳ ಫಲಿತಾಂಶವೇ ಮುಂದಿನ ದಿನಗಳಲ್ಲ ದಿಕ್ಸೂಚಿಯಾಗಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆ ಗಿರೀಶ್, ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪುಟ್ಟಸ್ವಾಮೀಗೌಡ, ಮಾಜಿ ನಿರ್ದೇಶಕ ಪಿ.ಚಲುವರಾಜು, ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಗಿರೀಶ್, ಆರ್.ಸೋಮಶೇಖರ್, ಮಾಜಿ ಸದಸ್ಯ ಚಂದ್ರು, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಿ.ಎಸ್.ನಿಂಗೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕೋಡಾಲ ರಾಧಾಕೃಷ್ಣ, ಟಿಎಪಿಸಿಎಂಎಸ್ ನಿರ್ದೇಶಕರಾದ ಹಾರೋಹಳ್ಳಿ ಕೃಷ್ಣ, ಆದರ್ಶ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಲುವೇಗೌಡ, ತಾಪಂ ಮಾಜಿ ಸದಸ್ಯ ಅಲ್ಪಳ್ಳಿಗೋವಿಂದಯ್ಯ, ಕ್ಯಾತನಹಳ್ಳಿಗವಿಗೌಡ(ಪ್ರವೀಣ್), ಮುಖಂಡರಾದ ಪಟೇಲ್‌ ಕೃಷ್ಣ, ರಾಜೇಶ್, ರಾಚಯ್ಯ, ಮಹೇಶ್ ಇದ್ದರು.