ಸಾರಾಂಶ
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಯಾರಿ ಆರಂಭಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ವಿಚಾರಗಳ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಭಯ ಪಕ್ಷಗಳ ಮುಖಂಡರ ಜತೆ ಸಭೆ ನಡೆಸಿದರು.ಮಂಗಳವಾರ ಜೆ.ಪಿ.ನಗರದಲ್ಲಿನ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮುಖಂಡರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಎಂ.ಕೃಷ್ಣಪ್ಪ, ಜೆಡಿಎಸ್ ಖಂಡರಾದ ಡಿ.ನಾಗರಾಜಯ್ಯ, ಕುಪೇಂದ್ರರೆಡ್ಡಿ, ನಿಖಿಲ್ ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.
ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಲಿದ್ದು, ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಪಣ ತೊಡಬೇಕು. ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆ ಪ್ರತಿಯೊಬ್ಬರದು ಎಂಬುದರ ಕುರಿತು ಸಮಾಲೋಚನೆ ನಡೆಸಲಾಗಿದೆ. ಅಲ್ಲದೇ, ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ವಿರುದ್ಧ ಸ್ಪರ್ಧಿಸುವ ಬಗ್ಗೆ ವದಂತಿ ಹಬ್ಬಿರುವ ಕುರಿತು ಸಹ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಜತೆ ಚರ್ಚೆ ನಡೆಸಿದ ನಂತರ ಅಭ್ಯರ್ಥಿ ಆಯ್ಕೆ, ಘೋಷಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಯಾರೇ ಅಭ್ಯರ್ಥಿಯಾದರೂ ಎನ್‌ಡಿಎ ಅಭ್ಯರ್ಥಿ ಆಗಿರುತ್ತಾರೆ, ಅವರು ನಮ್ಮ ಒಮ್ಮತದ ಅಭ್ಯರ್ಥಿ ಆಗಿರುತ್ತಾರೆ. ನಾವೆಲ್ಲರೂ ಮೈತ್ರಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಲು ಶ್ರಮಿಸಬೇಕು ಎಂದು ಕುಮಾರಸ್ವಾಮಿ ತಿಳಿಸಿದರು ಎನ್ನಲಾಗಿದೆ.
ಅಭ್ಯರ್ಥಿ ಘೋಷಣೆ ಬಗ್ಗೆ ವಿಳಂಬ ಮಾಡಬಾರದು. ಅಭ್ಯರ್ಥಿಯನ್ನು ಇಟ್ಟುಕೊಂಡು ನಾವು ಜನರ ಮುಂದೆ ಹೋಗಬೇಕು. ಚುನಾವಣೆ ದಿನ ಘೋಷಣೆ ಆಗುವ ಮುನ್ನವೇ ಅಭ್ಯರ್ಥಿ ಘೋಷಣೆಯಾಗಬೇಕು ಎಂದು ಸಭೆಯಲ್ಲಿ ಸಲಹೆಗಳು ಹೇಳಿಬಂದವು.