ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾ.18ರಿಂದ ಏ.2ರವರೆಗೆ ಸುಗಮವಾಗಿ ನಡೆಯಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ವೈ.ಕೆ.ತಿಮ್ಮೇಗೌಡ ತಿಳಿಸಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಪಿಎಸ್, ಕಿಕ್ಕೇರಿಯ ಕೆಪಿಎಸ್ ಶಾಲೆ, ಅಕ್ಕಿಹೆಬ್ಬಾಳು, ಬೂಕನಕೆರೆ ಮತ್ತು ಸಂತೇಬಾಚಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿ ಒಟ್ಟು 6 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ತಾಲೂಕಿನಲ್ಲಿ 24 ಸರ್ಕಾರಿ, 09 ಅನುದಾನಿತ ಮತ್ತು 13 ಅನುದಾನ ರಹಿತ ಶಾಲೆಗಳು ಸೇರಿ ಒಟ್ಟು 54 ಪ್ರೌಢ ಶಾಲೆಗಳಿದ್ದು ಸರ್ಕಾರಿ ಶಾಲೆಗಳಿಂದ 681 ಗಂಡು ಮತ್ತು 817 ಹೆಣ್ಣು ಸೇರಿ ಒಟ್ಟು 1489, ಅನುದಾನಿತ ಶಾಲೆಗಳಿಂದ 170 ಗಂಡು ಮತ್ತು 155 ಹೆಣ್ಣು ಸೇರಿ 325 ಹಾಗೂ ಅನುದಾನ ರಹಿತ ಶಾಲೆಗಳಿಂದ 316 ಗಂಡು ಮತ್ತು 284 ಹೆಣ್ಣು ಮಕ್ಕಳು ಸೇರಿ 600 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2423 ವಿದ್ಯಾರ್ಥಿಗಳು ಹೊಸದಾಗಿ(ಫ್ರೆಷ್) ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ ಎಂದರು.

1167 ಹೆಣ್ಣು ಮಕ್ಕಳು, 1256 ಗಂಡು ಮಕ್ಕಳು ಸೇರಿ 2423 ಫ್ರೆಷ್ ಹಾಗೂ 203 ಪುನರಾವರ್ತಿತರು ಸೇರಿ ಒಟ್ಟು 2626 ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು.


ತಾಲೂಕಿನಲ್ಲಿ ಯಾವುದೇ ಸೋಕ್ಷ್ಮ ಹಾಗೂ ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಲ್ಲ. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ಸಿಸಿ ಟಿ.ವಿ ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೆಂದ್ರಕ್ಕೆ ಇಬ್ಬರು ಸ್ಥಾನಿಕ ಜಾಗೃತ ದಳ ಸಿಬ್ಬಂದಿ ಹಾಗೂ ಅನ್ಯ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದರು.

ತಾಲೂಕು ಹಂತದಲ್ಲಿ ತಹಸೀಲ್ದಾರರು, ತಾಪಂ ಇಒ ಮತ್ತು ಕ್ಷೇತ್ರ ಶಿಕ್ಷಣಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣಾ ದಳವನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಭದ್ರತೆಗಾಗಿ ಆರಕ್ಷಕ ಸಿಬ್ಬಂದಿ ಹಾಗೂ ಮಕ್ಕಳ ಆರೋಗ್ಯ ಕಾಳಜಿಗಾಗಿ ಶುಶ್ರೂಷಕರನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಡಿಜಿಟಲ್, ಸ್ಮಾರ್ಟ್ ಕೈಗಡಿಯಾರಗಳನ್ನು ಧರಿಸುವಂತಿಲ್ಲ. ತಾಲೂಕಿನ ಎಲ್ಲಾ ಪರೀಕ್ಷಾ ಕೇಂದ್ರದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಸೂಕ್ತ ಪೀಠೋಪಕರಣದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಈ ವೇಳೆ ಶಿಕ್ಷಣ ಇಲಾಖೆ ಕ್ಷೇತ್ರ ಸಂಯೋಜಕ ಮಂಜುನಾಥ್ ಮತ್ತಿತರರಿದ್ದರು.