ಡಿ. 2 ಮತ್ತು 3ರಂದು ಅಂಜನಾದ್ರಿಯಲ್ಲಿ ನಡೆಯಲಿರುವ ಹನುಮಮಾಲಾ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ನಮ್ಮ ಅಧಿಕಾರಿಗಳು ಎಲ್ಲ ಕೆಲಸ ಮತ್ತು ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಗಂಗಾವತಿ: ಡಿ. 2 ಮತ್ತು 3ರಂದು ಅಂಜನಾದ್ರಿಯಲ್ಲಿ ನಡೆಯಲಿರುವ ಹನುಮಮಾಲಾ ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ನಮ್ಮ ಅಧಿಕಾರಿಗಳು ಎಲ್ಲ ಕೆಲಸ ಮತ್ತು ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಅಂಜನಾದ್ರಿಯಲ್ಲಿ ಡಿ. 2 ಮತ್ತು 3ರಂದು ನಡೆಯಲಿರುವ ಹನುಮಮಾಲೆ ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದ ಆನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು. ಕೊಪ್ಪಳ ಜಿಲ್ಲಾಡಳಿತ ವತಿಯಿಂದ ವಿವಿಧ ಸಮಿತಿಗಳನ್ನು ರಚಿಸಿ, ಈ ಕಾರ್ಯಕ್ರಮದ ಯಶಸ್ಸಿಗಾಗಿ ಹಲವಾರು ದಿನಗಳಿಂದ ತಯಾರಿ ಮಾಡಲಾಗಿದೆ. ಆಂಜನೇಯ ಜನ್ಮಸ್ಥಳ ಅಂಜನಾದ್ರಿಗೆ ಪ್ರತಿವರ್ಷದಂತೆ ಈ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ. ಡಿ. 2ರಂದು ಪಾರ್ಕಿಂಗ್ ಸ್ಥಳಗಳಲ್ಲಿಯೇ ಊಟದ ವ್ಯವಸ್ಥೆ ಮಾಡಲಾಗಿದೆ. ಡಿ. 3ರಂದು ಬೆಳಗ್ಗೆಯಿಂದಲೇ ವೇದಪಾಠ ಶಾಲೆಯಲ್ಲಿ ಗೋದಿ ಹುಗ್ಗಿ ಮತ್ತು ಅನ್ನ ಸಾಂಬಾರ ಪ್ರಸಾದ ವ್ಯವಸ್ಥೆ ಇರಲಿದೆ ಎಂದರು.

ಈ ಬಾರಿ ಪ್ಲಾಸ್ಟಿಕ್ ಬ್ಯಾನ್ ಮಾಡಿರುವುದರಿಂದ ಅವುಗಳನ್ನು ಚೆಕ್‌ಪೋಸ್ಟ್‌ನಲ್ಲೇ ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, ಕಡೆಬಾಗಿಲು ಮತ್ತು ಮುನಿರಾಬಾದಿನಿಂದ ಬರುವ ವಾಹನಗಳು ಪಾರ್ಕಿಂಗ್‌ಗೆ ನಿಗದಿಪಡಿಸಿದ ಸ್ಥಳಗಳಲ್ಲಿ ನಿಲ್ಲಿಸಬೇಕು. ಜನರಿಗೆ ಕಾರ್ಯಕ್ರಮದ ಮಾಹಿತಿ ನೀಡಲು ಆ್ಯಪ್ ಲೋಕಾರ್ಪಣೆ ಮಾಡಲಾಗಿದೆ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಭಕ್ತಾದಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ನಾನದ ವ್ಯವಸ್ಥೆ ಮಾಡಲಾಗಿದೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಆರ್. ಹೇಮಂತಕುಮಾರ್, ಸಹಾಯಕ ಆಯುಕ್ತ ಕ್ಯಾ. ಮಹೇಶ್ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಗಂಗಾವತಿ ತಹಸೀಲ್ದಾರ ಯು. ನಾಗರಾಜ, ಕಾರಟಗಿ ತಹಸೀಲ್ದಾರ್‌ ವಿಶ್ವನಾಥ ಮುರಡಿ ಉಪಸ್ಥಿತರಿದ್ದರು.