ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿದರು.
ಹಾವೇರಿ: ಜಿಲ್ಲಾಡಳಿತದಿಂದ ಜ. 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ ಅಲಂಕಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ತೋಟಗಾರಿಕೆ ಇಲಾಖೆ, ನಗರಸಭೆ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕೈಗೊಳ್ಳಬೇಕು ಎಂದು ಸೂಚಿಸಿದರು.ಸರ್ಕಾರಿ ಕಚೇರಿಗಳು, ನಗರದ ವೃತ್ತಗಳಿಗೆ ದೀಪಾಲಂಕಾರ, ಸನ್ಮಾನಿತರಿಗೆ, ಮಾಧ್ಯಮದವರಿಗೆ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಮಾಡಬೇಕು ಎಂದರು.ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ವೇದಿಕೆ ಸಿದ್ಧತೆ ಒಳಗೊಂಡಂತೆ ಗಣರಾಜ್ಯೋತ್ಸವದ ವಿವಿಧ ಸಿದ್ಧತೆಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವಂತೆ ಸಲಹೆ ನೀಡಿದರು. ಕ್ರೀಡೆ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಸವಣೂರು ಉಪ ವಿಭಾಗಾಧಿಕಾರಿ ಶುಭಂ ಸುಕ್ಲಾ, ಹಾವೇರಿ ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಶೋಕ ಶಾಸ್ತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ನಗರಸಭೆ ಪೌರಾಯುಕ್ತ ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.