ಹಾವೇರಿ: ಜಿಲ್ಲಾಡಳಿತದಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಗಜ್ಯೋತಿ ಶ್ರೀ ಬಸವೇಶ್ವರ, ಶ್ರೀ ಶಂಕರಾಚಾರ್ಯ ಜಯಂತಿ ಕುರಿತು ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಏ. 20ರಂದು ಬೆಳಗ್ಗೆ 9 ಗಂಟೆಗೆ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ, ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ ಶ್ರೀ ಹುಕ್ಕೇರಿಮಠದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಬಸವೇಶ್ವರ ಭಾವಚಿತ್ರ ಮೆರವಣಿಗೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಶ್ರೀ ಶಂಕರಾಚಾರ್ಯ ಜಯಂತಿ ಅಂಗವಾಗಿ ಏ. 21ರಂದು ಹಾವೇರಿ ನಗರದ ಸೀತಾರಾಮ ಮಂಗಲ ಕಾರ್ಯಾಲಯದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಶಂಕರ ಭಾರತಿ ಮಠದಿಂದ ಭಾವಚಿತ್ರ ಮೆರವಣಿಗೆ ನಡೆಸಲು ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ನಿರ್ಧರಿಸಲಾಯಿತು.
ಮಹನೀಯರ ಭಾವಚಿತ್ರ ಮೆರವಣಿಗೆ, ಪೊಲೀಸ್ ಬಂದೋಬಸ್ತ್, ಕಲಾ ತಂಡಗಳ ನೇಮಕ, ಉಪನ್ಯಾಸಕರು, ಆಮಂತ್ರಣ ಪತ್ರಿಕೆ, ವೇದಿಕೆ, ಧ್ವನಿ-ಬೆಳಕು, ಆಸನ, ಕುಡಿಯುವ ನೀರು, ಉಪಾಹಾರ, ವ್ಯವಸ್ಥೆಯನ್ನು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಮನ್ವಯದಿಂದ ಮಾಡಬೇಕೆಂದು ಸಲಹೆ ನೀಡಿದರು. ಈ ಮಹನೀಯರ ಜಯಂತಿಯನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಆಚರಣೆ ಮಾಡಲು ಆದೇಶ ಹೊರಡಿಸಲಾಗುವುದು ಎಂದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ನಗರಸಭೆ ಪೌರಾಯುಕ್ತ ಎಚ್. ಕಾಂತರಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್. ಕೋರಿಶೆಟ್ಟರ್, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.