ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ । ಜಯಂತಿ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುನಗರದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಏ.5 ರಂದು ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಏ.5 ರಂದು ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿಯನ್ನು ನಗರದ ಕುವೆಂಪು ಕಲಾ ಮಂದಿರದಲ್ಲಿ ಆಚರಿಸಲಾಗುವುದು. ಈ ಮಹಾನ್ ನಾಯಕನ ಜೀವನ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು ಎಂದರು.ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು. ಜಿಪಂ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ. ಈ ಇಬ್ಬರು ಮಹನೀಯರ ಜಯಂತಿ ಪ್ರಯುಕ್ತ ನಗರದ ತಹಸೀಲ್ದಾರ್ ಕಚೇರಿಯಿಂದ ಕುವೆಂಪು ಕಲಾಮಂದಿರದವರೆಗೆ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ತಿಳಿಸಿದರು.ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸರ್ಕಾರದ ಶಿಷ್ಠಾಚಾರದಂತೆ ಕಾರ್ಯಕ್ರಮ ಆಯೋಜಿಸಿ, ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಯುವಜನತೆಗೆ ಮಹನೀಯರ ಆದರ್ಶ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳ ಕುರಿತು ಅರಿವು ಮೂಡಿಸಲು ಉಪನ್ಯಾಸ, ಪ್ರಬಂಧ, ಭಾಷಣ ಸ್ಪರ್ಧೆ ಗಳನ್ನು ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಯೋಜಿಸುವಂತೆ ಸಭೆಯಲ್ಲಿ ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದರು.ಮಹನೀಯರ ಜಯಂತಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೆ, ಎಲ್ಲ ಜನಾಂಗದವರು ಜಯಂತಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಹೇಳಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಇದ್ದರು.