ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರ್ಣಗೊಳಿಸುವ ಸಂದರ್ಭದಲ್ಲಿ ಫೆ. 13ರಂದು ಹಾವೇರಿಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ವಿವಿಧ ಹಕ್ಕುಪತ್ರಗಳನ್ನು ವಿತರಣೆ ಮಾಡುವ ಮೂಲಕ ಸ್ಮರಣೀಯವಾಗಿಸುವ ನಿರ್ಧಾರ ಮಾಡಲಾಗಿದೆ.
ಹಾವೇರಿ: ರಾಜ್ಯ ಸರ್ಕಾರ ಸಾವಿರ ದಿನಗಳನ್ನು ಪೂರ್ಣಗೊಳಿಸುವ ಸಂದರ್ಭದಲ್ಲಿ ಫೆ. 13ರಂದು ಹಾವೇರಿಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ವಿವಿಧ ಹಕ್ಕುಪತ್ರಗಳನ್ನು ವಿತರಣೆ ಮಾಡುವ ಮೂಲಕ ಸ್ಮರಣೀಯವಾಗಿಸುವ ನಿರ್ಧಾರ ಮಾಡಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರ ಸಮ್ಮುಖದಲ್ಲಿ ನಡೆದ ಜಿಲ್ಲೆಯ ಎಲ್ಲ ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಇದುವರೆಗೆ ಆಗಿರುವ ಸಿದ್ಧತೆ ಮತ್ತು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ರಾಷ್ಟ್ರೀಯ ನಾಯಕರನ್ನೂ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಹ್ವಾನಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿಜಯನಗರದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ನಿರೀಕ್ಷೆ ಮೀರಿ ರಾಜ್ಯದ ವಿವಿಧ ಭಾಗಗಳಿಂದ ಜನ ಆಗಮಿಸಿದ್ದರು. ಕಾರ್ಯಕ್ರಮ ನಗರ ಪ್ರದೇಶದಲ್ಲಿ ಆಯೋಜನೆ ಮಾಡಿದ್ದರಿಂದ ಅನೇಕ ಜನರಿಗೆ ಸಮಾವೇಶದ ಸ್ಥಳಕ್ಕೆ ಆಗಮಿಸಲು ಸಮಸ್ಯೆಯಾಯಿತು. ಹಾವೇರಿಯಲ್ಲಿ ಹೊರವಲಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದರಿಂದ ಅಂತಹ ಸಮಸ್ಯೆಯಾಗುವುದಿಲ್ಲ. ನಗರ ಪ್ರದೇಶದ ಚಟವಟಿಕೆ ಮೇಲೂ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ತುಂಬಾ ಅಚ್ಚುಕಟ್ಟಾಗಿ ನಡೆಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಿವಾನಂದ ಪಾಟೀಲ ಅವರು, ಇದೇ ಅಚ್ಚುಕಟ್ಟು ಮತ್ತು ಶಿಸ್ತಿನಿಂದ ಸಾವಿರ ದಿನಗಳ ಸಾಧನಾ ಸಮಾವೇಶ ನಡೆಯವಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಂದಾಯ ಹಕ್ಕು ಪತ್ರ, ದರಖಾಸ್ತು ಪೋಡಿ, ಪೋಡಿ ಮುಕ್ತ ಗ್ರಾಮ, ಪೌತಿ ಖಾತೆ ಸೇರಿದಂತೆ ಹಲವು ಸವಲತ್ತುಗಳ ವಿತರಣೆಗೆ ಇದುವರೆಗೆ ಆಗಿರುವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ವಿವಿಧ ಜಿಲ್ಲೆಗಳಿಂದ ಆಗಮಿಸುವ ಫಲಾನುಭವಿಗಳಿಗೆ ವ್ಯವಸ್ಥಿತವಾಗಿ ಹಕ್ಕು ಪತ್ರಗಳನ್ನು ವಿತರಣೆ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದರು.ಹಾವೇರಿ ಸುತ್ತಮುತ್ತಲಿನ ಜಿಲ್ಲೆಗಳು ಮಾತ್ರ ಅಲ್ಲ, ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಫಲಾನುಭವಿಗಳು ಆಗಮಿಸಲಿದ್ದು, ಎಲ್ಲರಿಗೂ ಹಕ್ಕು ಪತ್ರವನ್ನು ವ್ಯವಸ್ಥಿತವಾಗಿ ವಿತರಣೆ ಮಾಡಲು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.ಇದುವರೆಗೆ ಆಗಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ ಪ್ರದೇಶದಲ್ಲೇ ಸಾಧನಾ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಈಗಾಗಲೇ ವೇದಿಕೆ ನಿರ್ಮಾಣ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ವೇದಿಕೆ ಪಕ್ಕದಲ್ಲೇ ಅತಿ ಗಣ್ಯರು ಮತ್ತು ಗಣ್ಯರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.ಹುಬ್ಬಳ್ಳಿ ಕಡೆಯಿಂದ ಬರುವವರ ಬೈಕ್ ಮತ್ತು ಇತರ ವಾಹನಗಳಿಗೆ ಪ್ರತ್ಯೇಕ ಹಾಗೂ ದಾವಣಗೆರೆ ಕಡೆಯಿಂದ ಬರುವವವರಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ವೈದ್ಯಕೀಯ ಕಾಲೇಜು ಆವರಣದಲ್ಲೇ ಹೆಲಿಪ್ಯಾಡ್ ನಿರ್ಮಿಸಲಿದ್ದು, ವೇದಿಕೆಗೆ ಬರಲು ಅನುಕೂಲವಾಗಲಿದೆ ಎಂದು ಹೇಳಿದರು.ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ, ಶಾಸಕರಾದ ಯು.ಬಿ. ಬಣಕಾರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯಾಸಿರ್‌ಖಾನ್ ಪಠಾಣ, ಕಂದಾಯ ಇಲಾಖೆ ಆಯುಕ್ತೆ ಮೀನಾ ನಾಗರಾಜ್ ಮತ್ತಿತರ ಅಧಿಕಾರಿಗಳು ಇದ್ದರು.