ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಪೈಲೆಟ್ ಪ್ರಾಜೆಕ್ಟ್ ಅಡಿ ಜಾರಿಗೊಳಿಸಲು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ ಶಾಲೆಗಳನ್ನು ಹೊಂಗನೂರಿನ ಕೆಪಿಎಸ್ ಗೆ ತುರ್ತಾಗಿ ವಿಲೀನಗೊಳಿಸಲು ಆದೇಶ ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದ್ದು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಕಿರಣ್ ಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಪೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ಓ) ವತಿಯಿಂದ ಮಂಗವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ ಎಂದರು.

ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸರ್ಕಾರವು ಸ್ಪಷ್ಟನೆ ನೀಡುತ್ತಿದೆ. ಸರ್ಕಾರದ ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಸರ್ಕಾರದ ದಾಖಲೆಗಳ ಆಧಾರದಲ್ಲಿ ಪರಿಶೀಲಿಸಿದಾಗ ಸರ್ಕಾರದ ಹೇಳಿಕೆಗೂ ವಾಸ್ತವಾಂಶಕ್ಕೂ ಸಂಬಂಧವೇ ಇಲ್ಲ ಎಂದರು.

ಪೈಲೆಟ್ ಪ್ರಾಜೆಕ್ಟ್

ಈ ಯೋಜನೆಯನ್ನು ಪೈಲೆಟ್ ಪ್ರಾಜೆಕ್ಟ್ ಅಡಿ ಜಾರಿಗೊಳಿಸಲು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ ಶಾಲೆಗಳನ್ನು ಹೊಂಗನೂರಿನ ಕೆಪಿಎಸ್ ಗೆ ತುರ್ತಾಗಿ ವಿಲೀನಗೊಳಿಸಲು ಆದೇಶ ನೀಡಲಾಗಿದೆ. ಆದರೆ ಯಾವುದೇ ಕಾರಣಕ್ಕೂ ತಮ್ಮ ಊರಿನ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಮತ್ತು ಅದೇ ಶಾಲೆಗಳನ್ನು ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.

ಇದೇ ರೀತಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ 40,000ಕ್ಕೂ ಅಧಿಕ ಶಾಲೆಗಳು ವಿಲೀನಗೊಳ್ಳುತ್ತವೆ. ಸಮುದಾಯ, ಹಳ್ಳಿಗಳ ನಡುವಿನ ಶಾಲೆ ಊರು ದಾಟಿ ಪಕ್ಕದೂರಿಗೆ ಹೋಗುತ್ತದೆ. ಇದಿಷ್ಟೇ ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.

ಜಿಲ್ಲೆಯಲ್ಲಿ 500 ಶಾಲೆ ಬಂದ್‌

ಚಿಕ್ಕಬಳ್ಳಾಪುರ ಜಿಲ್ಲೆಯ 500ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಿವೆ. ವಿಪರ್ಯಾಸ ವೆಂದರೆ, ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಸರ್ಕಾರವು ಮುಂದಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದೆ. ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದೇ ಒಂದು ಶಾಲೆಯನ್ನು ಮುಚ್ಚದಿದ್ದ ಮೇಲೆ ಸರ್ಕಾರಿ ಶಾಲೆಗಳನ್ನು ಬೇರೆ ಉದ್ದೇಶಕ್ಕೆ ವಿನಿಯೋಗಿಸುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ ಎಂದು ಅವರು ಪ್ರಶ್ನಿಸಿದರು.

ಶಾಲೆ ಮುಚ್ಚಲು ಬಿಡುವುದಿಲ್ಲ

ಎನೇ ಆದರೂ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ. ಇರುವ ಶಾಲೆಗಳಿಗೆ ಮೂಲ ಭೂತ ಸೌಕರ್ಯ ಮತ್ತು ಶಿಕ್ಷಕರನ್ನು ನೇಮಿಸಿ, ಗುಣಮಟ್ಟದ ಶಿಕ್ಷಣ ನೀಡಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಾಗುವಂತೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಎಐಡಿಎಸ್ಓ ಕಾರ್ಯದರ್ಶಿ ಮಂಡಳಿ ಸದಸ್ಯ ಲಕ್ಕಪ್ಪ ಇದ್ದರು.