ಹಾಸನ ಜಿಲ್ಲಾ ವಿಶ್ವಕರ್ಮ ಸಮಾಜ ಮತ್ತು ತಾಲೂಕು ವಿಶ್ವಕರ್ಮ ಸಮಾಜದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವಿವಿಧ ವಿಶ್ವಕರ್ಮ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಸೆ.೧೭ರಂದು ಗುರುವಾರ ನಗರದಲ್ಲಿ ವಿಶ್ವಕರ್ಮ ಮಹೋತ್ಸವ ೨೦೨೬ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎಚ್.ವಿ. ಹರೀಶ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಬೆಳ್ಳಿ ರಥ ಸಹಿತ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಮೆರವಣಿಗೆಯು ವಿಶ್ವಕರ್ಮ ವೃತ್ತ, ಎನ್.ಆರ್. ವೃತ್ತ, ಹೇಮಾವತಿ ಪ್ರತಿಮೆ ಹಾಗೂ ಮಹಾವೀರ ವೃತ್ತದ ಮೂಲಕ ಸಾಗಲಿದೆ. ವಿವಿಧ ಕಲಾ ತಂಡಗಳ ಪ್ರದರ್ಶನ, ಮಂಗಳವಾದ್ಯ ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿವೆ. ಬಳಿಕ ಮೆರವಣಿಗೆ ಹಾಸನಾಂಬಾ ಕಲಾಕ್ಷೇತ್ರ ತಲುಪಲಿದೆ.
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಾಸನ ಜಿಲ್ಲಾ ವಿಶ್ವಕರ್ಮ ಸಮಾಜ ಮತ್ತು ತಾಲೂಕು ವಿಶ್ವಕರ್ಮ ಸಮಾಜದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವಿವಿಧ ವಿಶ್ವಕರ್ಮ ಸಂಘ- ಸಂಸ್ಥೆಗಳ ಸಹಕಾರದೊಂದಿಗೆ ಸೆ.೧೭ರಂದು ಗುರುವಾರ ನಗರದಲ್ಲಿ ವಿಶ್ವಕರ್ಮ ಮಹೋತ್ಸವ ೨೦೨೬ವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎಚ್.ವಿ. ಹರೀಶ್ ತಿಳಿಸಿದ್ದಾರೆ.ವಿಶ್ವಕರ್ಮ ಸಮುದಾಯದ ಪರಂಪರೆ, ಕಲೆ, ಕೌಶಲ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಹಲವು ಕಾರ್ಯಕ್ರಮಗಳನ್ನು ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ.೧೭ರಂದು ಬೆಳಗ್ಗೆ ೮ ಗಂಟೆಗೆ ನಗರದ ಶ್ರೀ ಕ್ಷೇತ್ರ ಕಾಳಿಕಾಂಬಾ ಕಮಠೇಶ್ವರ ದೇವಾಲಯದಲ್ಲಿ ವಿಶ್ವಕರ್ಮ ಜಯಂತ್ಯುತ್ಸವಕ್ಕೆ ಚಾಲನೆ ದೊರೆಯಲಿದೆ. ದೇವಾಲಯದಲ್ಲಿ ವಿಶೇಷ ಅಭಿಷೇಕ, ಪುಷ್ಪಾಲಂಕಾರ, ವಿಶ್ವಕರ್ಮ ಹೋಮ ಸೇರಿ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ನಂತರ ದೇವಾಲಯದ ಆವರಣದಿಂದ ಮಂಗಳವಾದ್ಯ, ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬೆಳ್ಳಿ ರಥ ಸಹಿತ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಅಲ್ಲಿಂದ ಮೆರವಣಿಗೆಯು ವಿಶ್ವಕರ್ಮ ವೃತ್ತ, ಎನ್.ಆರ್. ವೃತ್ತ, ಹೇಮಾವತಿ ಪ್ರತಿಮೆ ಹಾಗೂ ಮಹಾವೀರ ವೃತ್ತದ ಮೂಲಕ ಸಾಗಲಿದೆ. ವಿವಿಧ ಕಲಾ ತಂಡಗಳ ಪ್ರದರ್ಶನ, ಮಂಗಳವಾದ್ಯ ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿವೆ. ಬಳಿಕ ಮೆರವಣಿಗೆ ಹಾಸನಾಂಬಾ ಕಲಾಕ್ಷೇತ್ರ ತಲುಪಲಿದೆ.
ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿಶ್ವಕರ್ಮ ಸಮುದಾಯದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ಜರುಗಲಿವೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಂಸದ ಶ್ರೇಯಸ್ ಎಂ. ಪಟೇಲ್, ಜಿಲ್ಲೆಯ ಶಾಸಕರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಆರ್. ರಂಜಿತ್ ಸೇರಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಮಾಜದ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಂ. ಮಹೇಶ್ ಅವರು ವಿಶ್ವಕರ್ಮ ಸಮುದಾಯದ ಇತಿಹಾಸ, ಪರಂಪರೆ ಹಾಗೂ ಸಾಮಾಜಿಕ ಕೊಡುಗೆ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿಶ್ವಕರ್ಮ ಮಹೋತ್ಸವವು ಸಮುದಾಯದ ಒಗ್ಗಟ್ಟು, ಪರಂಪರೆ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯವನ್ನು ಬಿಂಬಿಸುವ ಪ್ರಮುಖ ಕಾರ್ಯಕ್ರಮವಾಗಿದ್ದು, ಜಿಲ್ಲೆಯ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎಚ್.ವಿ. ಹರೀಶ್ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.