ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ

| Published : Oct 25 2025, 01:00 AM IST

ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧಗೊಳಿಸಿ: ಡಾ.ಜೆ.ಎನ್.ರಾಮಕೃಷ್ಣೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದೊಂದು ಸುಪ್ತ ಪ್ರತಿಭೆ ಇದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರತಿಭೆ ಅನಾವರಣಕ್ಕೆ ಅಗತ್ಯ ವೇದಿಕೆ ಸಿದ್ಧಗೊಳ್ಳಬೇಕು. ಪ್ರತಿಭಾವಂತರು ಸಾಧನೆಗಳ ಮೂಲಕ ತಮ್ಮ ಬದುಕಿನ ಕುರುಹುಗಳನ್ನು ಬಿಟ್ಟು ಹೋಗಬೇಕೆಂದು ಆದಿಚುಂಚನಗಿರಿ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಕರೆ ನೀಡಿದರು.

ಪಟ್ಟಣದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಬಿಎ, ಬಿ.ಕಾಂ.ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ವಾಗತ ಸಮಾರಂಭವನ್ನು ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಶೈಕ್ಷಣಿಕ ಪರಿಸರವನ್ನು ನಿರ್ಮಿಸಬೇಕು. ವೈಜ್ಞಾನಿಕ ಚಿಂತನೆಗಳ ತಳಹದಿ ಮೇಲೆ ಸುಸಂಸ್ಕೃತ ಮನಸ್ಸುಗಳ ಸೃಷ್ಟಿಯಾಗಬೇಕು. ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳು ಕಲಿಕಾ ಶ್ರದ್ಧೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಲಿಕೆ ಎಂದಿಗೂ ಒತ್ತಡವಾಗಬಾರದು. ಶ್ರದ್ಧೆ, ಭಕ್ತಿ ಮತ್ತು ಪ್ರೀತಿಯಿಂದ ಅಧ್ಯಯನ ಮಾಡಬೇಕು. ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಬಾಹ್ಯ ಆಸೆ-ಆಮಿಷಗಳಿಗೆ ಒಳಗಾಗಬಾರದು. ವಿದ್ಯಾರ್ಥಿ ಜೀವನ ನಿಮ್ಮ ಬದುಕಿನ ಯಶಸ್ಸಿನ ಸೋಪಾನವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದಾರಿ ತಪ್ಪಿದರೆ ಬದುಕಿನ ಪೂರ್ತಿ ನೀವು ಸಂಕಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿದ್ಯಾರ್ಥಿಗಳು ಕಲಿಯುವ ಆಸಕ್ತಿಯನ್ನು ಮೈಗೂಡಿಸಿಕೊಂಡು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡಬೇಕು. ಜ್ಞಾನದ ಬೆಳಕಿನ ಶಕ್ತಿಯನ್ನು ನಿರಂತರ ಕಲಿಕೆ ಹಾಗೂ ಅಭ್ಯಾಸದಿಂದ ಮಾತ್ರ ಪಡೆಯಲು ಸಾಧ್ಯವಿದೆ. ಅಧ್ಯಯನದಿಂದ ಮಾತ್ರ ಜ್ಞಾನ ಪರ್ವತವನ್ನು ಹತ್ತಲು ಸಾಧ್ಯ ಎಂದರು.

ವಿದ್ಯಾರ್ಥಿಗಳ ಜೀವನವು ಚಿನ್ನದ ಜೀವನ. ಪದವಿ ವ್ಯಾಸಂಗವನ್ನು ಸವಾಲಾಗಿ ತೆಗೆದುಕೊಂಡು ಪದವಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಅಭ್ಯಾಸ ಮಾಡಿ ಉತ್ತೀರ್ಣರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಮ್ಮ ಜೀವನದಲ್ಲಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಠಲಾಪುರ ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣ ತಿಲಕ್, ಕೆ.ಆರ್.ನೀಲಕಂಠ, ಪ್ರೌಢಶಾಲಾ ಅಧ್ಯಾಪಕ ಮಂಜುನಾಥ್, ತಾಲೂಕು ವಿತರಕರ ಸಂಘದ ಅಧ್ಯಕ್ಷ ಕೆ.ಎಸ್.ರಾಜೇಶ್, ಕಾಲೇಜಿನ ಪ್ರಾಂಶುಪಾಲೆ ಅಮೃತ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಇದೇ ವೇಳೆ ಡಾ.ಜೆ.ಎನ್.ರಾಮಕೃಷ್ಣೇಗೌಡ ಅವರನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.