ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮೂಲಕ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದು, ತಪ್ಪುಗಳನ್ನು ತಿದ್ದುಪಡಿ ಮಾಡುವುದು, ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಜಿಲ್ಲಾಡಳಿತದ ಮುಖ್ಯ ಉದ್ದೇಶ ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದರು.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತು ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ನಗರದ ಸರಳಾದೇವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ವಯಸ್ಸು, ಭಾವಚಿತ್ರಗಳಲ್ಲಿನ ದೋಷಗಳನ್ನು ಸರಿಪಡಿಸುವುದು, 18 ವರ್ಷ ತುಂಬಿದ ಯುವ ಮತದಾರರನ್ನು ಗುರುತಿಸಿ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು. ಮರಣ ಹೊಂದಿದ, ಕಾಯಂ ಆಗಿ ಬೇರೆಡೆಗೆ ವಲಸೆ ಹೋದ ಮತ್ತು ದ್ವಿಪ್ರತಿ ಹೊಂದಿರುವ ಮತದಾರರ ಹೆಸರುಗಳನ್ನು ನಿಯಮಾನುಸಾರ ಪಟ್ಟಿಯಿಂದ ತೆಗೆದುಹಾಕುವುದು ಎಸ್‌ಐಆರ್ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು.ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ವಂಚಿತರಾಗಬಾರದು ಮತ್ತು ಮುಂಬರುವ ಚುನಾವಣೆಗಳನ್ನು ದೋಷಮುಕ್ತ ಮತದಾರರ ಪಟ್ಟಿಯೊಂದಿಗೆ ಎದುರಿಸಬೇಕು ಎಂಬ ಉದ್ದೇಶದಿಂದ ಈ ತರಬೇತಿ ಹಾಗೂ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದರು.
ಬಿಎಲ್‌ಒಗಳು ಪ್ರತಿ ಮನೆಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ವೋಟರ್ ಹೆಲ್ಪ್‌ಲೈನ್ ಆ್ಯಪ್ ಮತ್ತು ಬಿಎಲ್‌ಒ ಆ್ಯಪ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಎಂದರು.ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಫಾರಂ 6-ಹೊಸ ಮತದಾರರ ನೋಂದಣಿಗಾಗಿ, ಫಾರಂ 7-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು/ ಆಕ್ಷೇಪಣೆ ಸಲ್ಲಿಸಲು, ಫಾರಂ 8-ವಿಳಾಸ ಬದಲಾವಣೆ, ತಿದ್ದುಪಡಿ ಹಾಗೂ ಹೊಸ ಪಿವಿಸಿ ಕಾರ್ಡ್‌ಗಳಿಗಾಗಿ ಇರುವ ನಮೂನೆ ಅರ್ಜಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಾವುದೇ ಲೋಪದೋಷಗಳಿಲ್ಲದೆ, ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಬೇಕು. ಅಗತ್ಯವಿರುವ ಪ್ರಮುಖ ಸೂಚನೆಗಳು ಮತ್ತು ತಾಂತ್ರಿಕ ವಿವರಗಳನ್ನು ತರಬೇತಿಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ, ವ್ಯವಸ್ಥಿತವಾಗಿ ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಗತ್ಯ ಮಾಹಿತಿ ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಆಗಿರುವ ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಸಹಾಯಕ ಮತದಾರರ ನೋಂದಣಾಧಿಕಾರಿ ಆದ ತಹಶೀಲ್ದಾರ ಟಿ.ರೇಖಾ, ತಾಲೂಕು ಕಚೇರಿಯ ಎಲ್ಲ ಶಿರಸ್ತೇದಾರರು ಹಾಗೂ ಉಪ ತಹಶೀಲ್ದಾರರು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.