ಸಾರಾಂಶ
ಕನ್ನಡಪ್ರಭ ವಾರ್ತೆ ರಾಮನಗರ
ಆಗಸ್ಟ್ 15ರಂದು 79ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನಿರ್ದೇಶನ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಆಸನಗಳು, ಉತ್ತಮ ಮೈಕ್‌ಗಳ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ಅಡಚಣೆಯಾಗದಂತೆ ನಿರಂತರ ವಿದ್ಯುತ್ ಪೂರೈಕೆ, ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ, ರಾಜ್ಯದ ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳಿಗೆ ತಲುಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿ, ಸೇವಾ ದಳದವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಆಸನದ ವ್ಯವಸ್ಥೆ, ವೇದಿಕೆ ನಿರ್ಮಾಣ, ತಗ್ಗು ಗುಂಡಿಗಳಿದ್ದರೆ ಮುಚ್ಚುವುದು, ಇತ್ಯಾದಿ ಕೆಲಸಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿರ್ವಹಿಸಬೇಕು ಎಂದರು.
ಅಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಧ್ವಜ ಖಾದಿ ಬಟ್ಟೆಯದ್ದೆ ಆಗಿರಬೇಕು. ಧ್ವಜಾರೋಹಣದ ಹಿಂದಿನ ದಿನವೇ ಈ ಬಗ್ಗೆ ತಾಲೀಮು ನಡೆಸಬೇಕು. ಧ್ವಜ ಸಂಹಿತೆಗೆ ಅಪಚಾರವಾಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರವಹಿಸಬೇಕು. ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬರಬೇಕು ಎಂದು ಸೂಚಿಸಿದರು.ಕಾರ್ಯಕ್ರಮದಲ್ಲಿ ನಾಡಗೀತೆ, ರೈತ ಗೀತೆಯನ್ನು ನುರಿತ ಕಲಾವಿದರಿಂದ ಹಾಡಿಸಬೇಕು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರು ಹಾಗೂ ಅಪರ ಜಿಲ್ಲಾಧಿಕಾರಿಗಳು ಕರೆ ನೀಡಿದರು.ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಲಾಲ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
-----8ಕೆಆರ್ ಎಂಎನ್ 1.ಜೆಪಿಜಿ
ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವ ಭಾವಿ ಸಿದ್ಧತಾ ಸಭೆ ನಡೆಯಿತು.