ಸಾರಾಂಶ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅ.2ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅ.2ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ಗಾಂಧಿ ಜಯಂತಿ ಆಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅ.2ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಎಲ್ಲ ಶಾಲಾ ಕಾಲೇಜುಗಳಲ್ಲಿ ತಪ್ಪದೇ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಗೌರವ ಸಮರ್ಪಿಸುವ ಮೂಲಕ ಜಯಂತಿ ಆಚರಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸುವ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಯಿಂದ ಜಿಲ್ಲಾಧಿಕಾರಿಗಳ ಕಚೇರಿ, ಒನಕೆ ಓಬವ್ವ ವೃತ್ತ ಸುತ್ತಮುತ್ತಲ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಆವರಣವನ್ನು ಶುಚಿಗೊಳಿಸಲು ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ನಗರಸಭೆ ಅಧಿಕಾರಿಗಳು ವ್ಯವಸ್ಥೆ ಕೈಗೊಳ್ಳಬೇಕು. ಎಲ್ಲ ಅಧಿಕಾರಿಗಳು ತಪ್ಪದೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ನಗರಸಭೆ ವತಿಯಿಂದ ಗಾಂಧೀಜಿ ಹಾಗೂ ಶಾಸ್ತ್ರಿವರ ಭಾವಚಿತ್ರಕ್ಕೆ ಅಲಂಕರಿಸುವ ಕಾರ್ಯ ಆಗಬೇಕು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಗಾಂಧೀಜಿಯವರ ಪ್ರಿಯ ಭಜನೆಗಳು ಹಾಗೂ ಗೀತೆಗಳ ಗಾಯನ ಏರ್ಪಾಡು ಮಾಡಬೇಕು. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಆಯೋಜಿಸಬೇಕು. ವಾರ್ತಾ ಇಲಾಖೆಯಿಂದ ಗಾಂಧೀಜಿ ಜೀವನ ಸಾಧನೆ ಕುರಿತು ಉಪನ್ಯಾಸಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಗಾಂಧೀ ಜಯಂತಿ ಅಂಗವಾಗಿ ವಾರ್ತಾ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಥಮ ಸ್ಥಾನ ಪಡೆದ ಪ್ರಬಂಧಗಳನ್ನು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸಭೆಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿಪಂ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪ.ಪೂ. ಇಲಾಖೆ ಉಪ ನಿರ್ದೇಶಕ ಕೆ.ತಿಮ್ಮಯ್ಯ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದಸ್ವಾಮಿ, ಆಹಾರ ಇಲಾಖೆ ಉಪ ನಿರ್ದೇಶಕ ಸಿದ್ರಾಮ ಮಾರಿಹಾಳ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.